ಬೆಂಗಳೂರು ಮಹಾನಗರ ಪ್ರದೇಶ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆ, ರಾಜಕಾಲುವೆಗಳ ಅಭಿವೃದ್ಧಿಗೆ ಅಮೃತ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ.
ಬಿಬಿಎಂಪಿ ವತಿಯಿಂದ ಸ್ಥಳೀಯ ಅಗತ್ಯಕ್ಕೆ ತಕ್ಕಂತೆ ಕ್ರಿಯಾ ಯೋಜನೆ ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಉತ್ತರಿಸಿದ ಸಚಿವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆಯಲ್ಲಿ ತುಂಬಿರುವ ಹೂಳು ಮತ್ತು ಘನತ್ಯಾಜ್ಯವನ್ನು ತೆಗೆದು ಮಳೆಗಾಲದಲ್ಲಿ ಉಂಟಾಗುವ ಹಾನಿ ತಡೆಯಲು ಕ್ರಮ ಕೈಗೊಳ್ಳಲಾಗಿದೆ.
ಇದಕ್ಕಾಗಿ ಕಳೆದ ಮೂರು ವರ್ಷಗಳಲ್ಲಿ 160.85 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. 11.83 ಕಿ.ಮೀ ಉದ್ದದ ಪ್ರಥಮ, ದ್ವಿತೀಯ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಂಡಿದ್ದು, ಪ್ರಸ್ತುತ 98.27 ಕಿ.ಮೀ ಉದ್ದದ ರಾಜಕಾಲುವೆ ಅಭಿವೃದ್ಧಿಪಡಿಸಲಾಗಿದೆ. ಉಳಿದ 14.56 ಕಿ.ಮೀ ಉದ್ದದ ರಾಜಕಾಲುವೆಗಳ ಅಭಿವೃದ್ದಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
ರಾಜಕಾಲುವೆಗಳು ಹಾಳಾಗಿದ್ದು, ಸರಿಪಡಿಸಲು ಕಾಂಕ್ರೀಟ್ ಗೋಡೆ ನಿರ್ಮಾಣವಾಗುತ್ತಿದೆ. ಮಳೆ ನೀರು ಬಂದಾಗ ರಾಜಕಾಲುವೆಗಳಿಂದ ಉಂಟಾಗುವ ಹಾನಿ ತಡೆಯಲು ಕೈಗೊಳ್ಳುವ ಕಾಮಗಾರಿಗಳಲ್ಲಿ ತಾರತಮ್ಯ ಮಾಡುತ್ತಿಲ್ಲ. ಸುಮಾರು 100 ಸ್ಥಳಗಳನ್ನು ಗುರುತಿಸಲಾಗಿದ್ದು, ಆದ್ಯತೆ ಮೇಲೆ ಕೈಗೆತ್ತಿಕೊಳ್ಳಲಾಗುವುದು. ಈ ಸಂಬಂಧ ಬಿಡಬ್ಲ್ಯುಎಸ್‍ಎಸ್‍ಬಿ ಜೊತೆ ಸಭೆ ನಡೆಸಲಾಗಿದೆ ಎಂದರು.