ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಒಂದು ವರ್ಷ ಹಾಗೂ ಬಿಜೆಪಿ ಆಡಳಿತಕ್ಕೆ ಮೂರು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜುಲೈ 28) ದೊಡ್ಡಬಳ್ಳಾಪುರದಲ್ಲಿ ಬೃಹತ್ ಜನೋತ್ಸವ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಅವರು ತಿಳಿಸಿದರು.
ದೊಡ್ಡಬಳ್ಳಾಪುರದ ದೇವನಹಳ್ಳಿ ರಸ್ತೆಯ ರಘುನಾಥಪುರದ ಬಳಿ ಜನೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯಲ್ಲಿ ಭಾಗಯಾಗಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ರಿಯಾತ್ಮಕ ಆಡಳಿತದ ವಿಚಾರದಲ್ಲಿ ನೀತಿ ಆಯೋಗವು ಕರ್ನಾಟಕಕ್ಕೆ ಮೊದಲ ಸ್ಥಾನ ನೀಡಿದೆ. ಯೂನಿಕಾರ್ನ್ (ಸ್ಟಾರ್ಟಪ್) ವಿಚಾರದಲ್ಲೂ ಕರ್ನಾಟಕವು ಪ್ರಥಮ ಸ್ಥಾನದ ಹೆಗ್ಗಳಿಕೆಯನ್ನು ಹೊತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ 5 ಟ್ರಿಲಿಯನ್ ಇಕಾನಮಿ ಕನಸು- ಗುರಿ ಸಾಧನೆಗೆ ಕರ್ನಾಟಕದ ಕೊಡುಗೆ ದೊಡ್ಡಮಟ್ಟದಲ್ಲಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಮಧುಗಿರಿ ಭಾಗ, ಬೆಂಗಳೂರಿನ ಬ್ಯಾಟರಾಯನಪುರ, ದಾಸರಹಳ್ಳಿ, ಯಲಹಂಕ ವಿಧಾನಸಭಾ ಕ್ಷೇತ್ರಗಳ 1.5ರಿಂದ 2 ಲಕ್ಷ ಜನರು ಭಾಗವಹಿಸಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಸಂಪುಟದ ಎಲ್ಲ ಸದಸ್ಯರು ಭಾಗವಹಿಸಲಿದ್ದಾರೆ. ಜೊತೆಗೆ ಪಕ್ಷದ ಮಾರ್ಗದರ್ಶಕ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಪ್ರಭಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಪಾಲ್ಗೊಳ್ಳುವರು ಎಂದರು. ರಾಷ್ಟ್ರೀಯ ಅಧ್ಯಕ್ಷರಿಗೆ ವಿಶೇಷ ಸ್ವಾಗತ ಕೋರಲು ತಯಾರಿ ಮಾಡಿಕೊಂಡಿದ್ದೇವೆ ಎಂದು ವಿವರಿಸಿದರು.