ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಈ ಕಂಪೆನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದ್ದು, ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.
ಇದಕ್ಕೂ ಮುನ್ನ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಭಾರ್ತಿ ಎಂಟರ್ ಪ್ರೈಸಸ್ ನ ಅಧ್ಯಕ್ಷ ಹಾಗೂ ಸಿ ಇ ಓ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವು ಎಲ್ಲ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು .