Publish Date: Thu, 15 Jun 2023 (18:30 IST)
Updated Date: Thu, 15 Jun 2023 (18:31 IST)
ಅಕ್ಕಿ ಇಟ್ಟುಕೊಂಡು ಕೊಡಲಾಗುವುದಿಲ್ಲ ಎಂದರೆ ಇವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು ಎಂದುಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದೆ. ಜುಲೈ 1ರಂದು ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಟನ್ ಅಗತ್ಯವಿದೆ ಎಂದು ಕೋರಿ ಜೂನ್ 9ರಂದು ಪತ್ರ ಬರೆಯಲಾಗಿತ್ತು. ಇದಕ್ಕೆ ಜೂನ್ 12ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್ಗೆ 3400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡುವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಎಂದು ವಾಗ್ದಾಳಿ ನಡೆಸಿದ್ದಾರೆ.