ಮಂಡ್ಯ: ರಾಜ್ಯದ ಎಲ್ಲ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP-2020) ಕುರಿತು ಒಂದು ದಿನದ ಕಾರ್ಯಾಗಾರವನ್ನು ಸೆಪ್ಟೆಂಬರ್ 7ರ ಮಂಗಳವಾರದಂದು ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಸೋಮವಾರ ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ವಿಚಾರ ಸಂಕಿರಣವನ್ನು ನಡೆಸುವಂತೆ ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ ಎಂದರು.
ಕಾಲೇಜುಗಳ ಅಧ್ಯಾಪಕರು ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಮತ್ತು ಪೋಷಕರು ರಾಜ್ಯಾದ್ಯಂತ ಈ ಸೆಮಿನಾರ್‌ಗಳಲ್ಲಿ ಭಾಗಿಯಾಗುತ್ತಾರೆ ಎಂದು ಸಚಿವರು ಮಾಹಿತಿ ನೀಡಿದರು.
ಸರ್ಕಾರವು ಈಗಾಗಲೇ ವಿಶ್ವವಿದ್ಯಾನಿಲಯದ ಮಟ್ಟದಲ್ಲಿ ಮತ್ತು ಕೆಲ ಕಾಲೇಜುಗಳಲ್ಲಿ ಹಲವಾರು ಸಂವಾದ ಕಾರ್ಯಕ್ರಮಗಳನ್ನು ನಡೆಸಿದೆ ಎಂದ ಅವರು, ಈಗ ಇದನ್ನು ರಾಜ್ಯಾದ್ಯಂತ ಎಲ್ಲ ಕಾಲೇಜುಗಳಿಗೂ ವಿಸ್ತರಿಸಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.