ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ನಿರೀಕ್ಷೆಯಲ್ಲಿ ಕಾದು ಕುಳಿತಿದ್ದ ಮಹಿಳೆಯರಿಗೆ ಕೊನೆಗೂ ಗುಡ್ನ್ಯೂಸ್ ಸಿಕ್ಕಿದೆ. ಇದೇ ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಿಸಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶನಿವಾರ ಸುದ್ದಿಗೋಷ್ಠಿ ನಡೆಸಿ, ಜು.17 ರಂದು (ಸೋಮವಾರ) ಗೃಹಲಕ್ಷ್ಮಿ ಯೋಜನೆ ಆ್ಯಪ್ಗೆ ಚಾಲನೆ ನೀಡಲಾಗುವುದು. ಜು.19 ರಿಂದ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
ಯೋಜನೆಯಡಿ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ. ಯೋಜನೆಯಡಿ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿರುವುದಿಲ್ಲ. ಒಂದು ವೇಳೆ ನಿಗದಿತ ದಿನಾಂಕ, ಸಮಯಕ್ಕೆ ನೋಂದಾಯಿಸಿಕೊಳ್ಳಲು ಸಾಧ್ಯವಾಗದಿದ್ದರೆ ಮುಂದೆ ಯಾವುದೇ ದಿನಾಂಕ ಅಥವಾ ಸಮಯದಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಹೇಳಿದರು.
ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆಯು ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗಿರಬಾರದು. ಅಂತಹವರಿಗೆ ಈ ಯೋಜನೆ ಸೌಲಭ್ಯ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.