ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮಕ್ಕಳಿಗೆ ಲಸಿಕಾಕರಣವು ಪ್ರಮುಖ ಪಾತ್ರ ವಹಿಸಲಿದ್ದು, 12ರಿಂದ 14 ವರ್ಷದ ಮಕ್ಕಳ ಲಸಿಕಾಕರಣ ಯಶಸ್ಸಿಗಾಗಿ ಶಾಲೆಗಳಲ್ಲಿ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್ ತಿಳಿಸಿದರು.
ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ 12ರಿಂದ 14 ವರ್ಷದ ಮಕ್ಕಳಿಗೆ ಲಸಿಕಾಕರಣ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರೊಂದಿಗೆ ಸಚಿವ ನಾಗೇಶ್ ಅವರು ಚಾಲನೆ ನೀಡಿದರು.
15 ರಿಂದ 18 ವರ್ಷದೊಳಗಿನ ಮಕ್ಕಳ ಲಸಿಕಾಕರಣಕ್ಕೆ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇದರಿಂದ ಲಸಿಕಾಕರಣ ವೇಗ ಪಡೆಯಿತು. ಅದೇ ರೀತಿ ಈಗ 12ರಿಂದ 14 ವರ್ಷದ ಮಕ್ಕಳಿಗೆ ಲಸಿಕಾಕರಣ ಆರಂಭವಾಗಿದ್ದು, ಶಾಲೆಗಳಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ಶಿಕ್ಷಣ ಇಲಾಖೆ, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಕೆಲವೇ ದಿನಗಳಲ್ಲಿ ಶಾಲೆಗಳಲ್ಲಿ ಲಸಿಕಾಕರಣ ಆರಂಭವಾಗಲಿದೆ. 12ರಿಂದ 14 ವಯೋಮಾನದ ಎಲ್ಲ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ. ಪಾಲಕರು ಸಹಕಾರ ನೀಡುವ ಮೂಲಕ ಸೋಂಕಿನ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಬೇಕು ಎಂದು ಸಚಿವರು ಹೇಳಿದರು.
ಕೋವಿಡ್ -19 ವಿರುದ್ಧ ಪ್ರಮುಖ ಅಸ್ತ್ರವಾಗಿರುವ ಲಸಿಕೆಯನ್ನು ಉಚಿತವಾಗಿ ನೀಡುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವದ ನಿರ್ಧಾರದಿಂದಾಗಿ ಈವರೆಗೆ ದೇಶದಲ್ಲಿ 182 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. 130 ಕೋಟಿಗೂ ಅಧಿಕ ಜನಸಂಖ್ಯೆಯ ಭಾರತದಲ್ಲಿ ಬೃಹತ್ ಪ್ರಮಾಣದಲ್ಲಿ ಉಚಿತ ಲಸಿಕೆ ಅಭಿಯಾನ ಯಶಸ್ಸು ಸಾಧಿಸಿದೆ. ಮಕ್ಕಳ ಲಸಿಕಾಕರಣ ಕೂಡ ಅದೇ ರೀತಿ ಯಶಸ್ಸು ಸಾಧಿಸುತ್ತದೆ. ಕೋವಿಡ್-19 ವಿರುದ್ಧ ಹೋರಾಟ ಮುಂದುವರೆದಿದ್ದು, ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಸಚಿವ ನಾಗೇಶ್ ನುಡಿದರು.
ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್‌ಎಸ್ಎಲ್‌ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆಗಳನ್ನು ಎರಡು ತಿಂಗಳ ಹಿಂದೆಯೇ ಆರಂಭಿಸಿದೆ. ಪರೀಕ್ಷಾ ಮಂಡಳಿ ಅಧಿಕಾರಿಗಳ ಜೊತೆ ಹಲವು ಸುತ್ತಿನ ಸಭೆ ನಡೆಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಸೂಚನೆ ನೀಡಲಾಗಿದೆ ಎಂದು ಸಚಿವ ನಾಗೇಶ್ ತಿಳಿಸಿದರು.