ಬಿಬಿಎಂಪಿ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಗರದಾದ್ಯಂತ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಮಾರಾಟ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳ ಮೇಲೆ ಅನಿರೀಕ್ಷಿತ ತಪಾಸಣೆ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಜೊತೆಗೆ ದಂಡ ವಿಧಿಸಲಾಗುತ್ತಿದೆ. ನಗರದಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಪೂರ್ಣವಾಗಿ ನಿಲ್ಲಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಘನತ್ಯಾಜ್ಯ ವಿಭಾಗದದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಂತೆ ಪಾಲಿಕೆಯ ಘನತ್ಯಾಜ್ಯ ವಿಭಾಗದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಕಿರಿಯ ಆರೋಗ್ಯ ಪರಿವೀಕ್ಷಕರು, ಮಾರ್ಷಲ್‌ಗಳ ಮೇಲ್ವಿಚಾರಕರು ಹಾಗೂ ಮಾರ್ಷಲ್‌ಗಳ ತಂಡವು ಅನಿರೀಕ್ಷಿತವಾಗಿ ಸಗಟು ವ್ಯಾಪಾರ ಮಳಿಗೆಗಳು, ಅಂಗಡಿಗಳು, ಹೋಟೆಲ್ ಉದ್ದಿಮೆ, ಪ್ಲಾಸ್ಟಿಕ್ ಉತ್ಪಾದಿಸುವ ಉದ್ದಿಮೆಗಳಿಗೆ ಭೇಟಿ ನೀಡಿ ಪ್ಲಾಸ್ಟಿಕ್ ಜಪ್ತಿ ಮಾಡುವುದರ ಜೊತೆಗೆ ದಂಡ ವಿಧಿಸುತ್ತಿವೆ. ಅಲ್ಲದೆ ಮತ್ತೊಮ್ಮೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ವ್ಯಾಪಾರಸ್ಥರು ಮಾರಾಟಗಾರರು ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.