ಡೈರಿ ಬಹಿರಂಗದ ಹಿಂದೆ ಬಿಜೆಪಿ ರಾಜಕಾರಣಿಗಳ ಷಡ್ಯಂತ್ರ ಅಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಂಶಯ ವ್ಯಕ್ತಪಡಿಸಿದ್ದಾರೆ.
ಕಳೆದ ಒಂದು ವರ್ಷಗಳ ಹಿಂದೆ ಪತ್ತೆಯಾದ ಡೈರಿಯ ಬಗ್ಗೆ ಇದೀಗ ಬಿಜೆಪಿ ರಾಜಕಾರಣಿಗಳು ಮಾಡುತ್ತಿರುವ ಆರೋಪ ನೋಡಿದಲ್ಲಿ ಇದರ ಹಿಂದೆ ಸಂಚು ಅಡಗಿದೆ ಎನ್ನುವ ಅನುಮಾನ ಬರುತ್ತಿದೆ ಎಂದು ಹೇಳಿದ್ದಾರೆ.
ಕಳೆದ ವರ್ಷ ವಿಧಾನಪರಿಷತ್ ಸದಸ್ಯ ಗೋವಿಂದರಾಜು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದಾಗ ಡೈರಿ ಪತ್ತೆಯಾಗಿದೆ ಎಂದು ಹೇಳಲಾಗಿತ್ತು. ಒಂದು ವರ್ಷದವರೆಗೆ ಐಟಿ ಅಧಿಕಾರಿಗಳು ಡೈರಿಯ ಬಗ್ಗೆ ತನಿಖೆ ನಡೆಸಿ ಯಾಕೆ ಕ್ರಮಕೈಗೊಳ್ಳಲಿಲ್ಲ ಎಂದು ತಿರುಗೇಟು ನೀಡಿದರು.
ಡೈರಿಗೂ ನನಗೂ ಯಾವುದೇ ಸಂಬಂಧವಿಲ್ಲ. ಅದರಲ್ಲಿರುವ ಬರಹ ಕೂಡಾ ನನ್ನದಲ್ಲ ಎಂದು ಈಗಾಗಲೇ ಹೇಳಿದ್ದಾರೆ. ಒಂದು ವೇಳೆ, ಬರವಣಿಗೆ ಅವರದೇ ಆಗಿದ್ದರೆ ಖಂಡಿತ ಕಾನೂನು ಕ್ರಮ ತೆಗೆದುಕೊಳ್ಳಬಹುದಿತ್ತು. ಡೈರಿಯ ಬಗ್ಗೆ ಐಟಿ ಅಧಿಕಾರಿಗಳು ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಹಿರಂಗಪಡಿಸಬೇಕಾಗಿದೆ ಎಂದರು.
ದೇಶದ ಆದಾಯ ತೆರಿಗೆ ಇಲಾಖೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಆಧೀನದಲ್ಲಿ ಕಾರ್ಯನಿರ್ವಹಿಸುತ್ತಿದೆ. ಡೈರಿ ಬಗ್ಗೆ ಯಾವುದೇ ತನಿಖೆ ನಡೆಸಲಿ ಕಾಂಗ್ರೆಸ್ ಪಕ್ಷ ಸಿದ್ದವಾಗಿದೆ ಎಂದು ಘೋಷಿಸಿದರು.
ಕೇಂದ್ರ ಸಚಿವ ಅರುಣ್ ಜೇಟ್ಲಿ, ಕೇಂದ್ರ ಸಚಿವ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಾರದರ್ಶಕವಾಗಿ ಅಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ವಿರುದ್ಧ ಸಂಚು ರೂಪಿಸುತ್ತಿದ್ದಾರೆ. ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಸಂಭಾಷಣೆಯಲ್ಲಿ ಇದು ಸಾಬೀತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.