ಡಿವೈಎಸ್ಪಿ ಎಂ.ಕೆ. ಗಣಪತಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಕೂಡಲೇ ರಾಜೀನಾಮೆ ನೀಡುವಂತೆ ಬಿಜೆಪಿ ಒತ್ತಾಯಿಸಿದೆ.
ನಗರದ ಮೌರ್ಯ ಸರ್ಕಲ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಆರ್. ಅಶೋಕ್, ಸಚಿವ ಜಾರ್ಜ್ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಸುಪ್ರೀಂಕೋರ್ಟ್ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿದೆ. ಪ್ರಕರಣದಲ್ಲಿ ಜಾರ್ಜ್ ಅವರನ್ನು ತನಿಖೆಗೊಳಪಡಿಸುವಂತೆ ಕೂಡಾ ಆದೇಶಿಸಿದೆ. ಆದಾಗ್ಯೂ ಸಚಿವ ಜಾರ್ಜ್ ರಾಜೀನಾಮೆ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಎಂ.ಕೆ.ಗಣಪತಿಯದ್ದು ಆತ್ಮಹತ್ಯೆಯಲ್ಲ, ಹತ್ಯೆ. ಇದರ ಹಿಂದಿರುವ ದುಷ್ಟಶಕ್ತಿಗಳ ಕೈವಾಡ ಬಹಿರಂಗವಾಗಬೇಕಿದೆ. ಸತ್ಯ ಬಹಿರಂಗವಾಗಬೇಕಾದಲ್ಲಿ ಸಚಿವ ಜಾರ್ಜ್ ರಾಜೀನಾಮೆ ನೀಡಬೇಕು. ಅವರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಬಿಜೆಪಿ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು ಪಾಲ್ಗೊಂಡಿದ್ದು ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.