ಮುಂಬರುವ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ತಂತ್ರಗಾರಿಕೆ ಹೆಣೆಯುವ ಸಂಬಂಧ ಇಂದು ಸಂಜೆ ಬೆಂಗಳೂರಿನ ಹೊರವಲಯದಲ್ಲಿ ಮುಖ್ಯಮಂತ್ರಿ ಸೇರಿದಂತೆ ಆಡಳಿತಾರೂಢ ಬಿಜೆಪಿಯ ಹಿರಿಯ ನಾಯಕರು ಹಾಗೂ ಸಂಘ ಪರಿವಾರದ ಮುಖಂಡರನ್ನು ಒಳಗೊಂಡ ಮಹತ್ವದ ಚಿಂತನ-ಮಂಥನ ಸಭೆ ನಡೆಯಲಿದೆ.
ಬೆಂಗಳೂರಿನ ಹೊರವಲಯದಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಡಿ.ವಿ.ಸದಾನಂದ ಗೌಡ, ಹಿರಿಯ ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಡಾ.ಅಶ್ವತ್ಥ ನಾರಾಯಣ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸೇರಿ ಆಯ್ದ ಕೆಲವು ನಾಯಕರು ಮಾತ್ರ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ರಾಷ್ಟ್ರೀಯ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೊರತುಪಡಿಸಿ ಅಧಿಕೃತವಾಗಿ ಮತ್ತೆ ಯಾರು ಪಾಲ್ಗೊಳ್ಳಲಿದ್ದಾರೆ ಎನ್ನುವುದನ್ನು ಗೌಪ್ಯವಾಗಿಡಲಾಗಿದೆ.
ಸಂಜೆ ಎಲ್ಲ ನಾಯಕರು ಬೆಂಗಳೂರು ಹೊರ ವಲಯದ ರೆಸಾರ್ಟ್‍ಗೆ ತೆರಳಿ ಅಲ್ಲಿಯೇ ಸಭೆ ನಡೆಸಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಿಗ್ಗೆಯಿಂದ ಸಂಜೆವರೆಗೂ ಸುದೀರ್ಘ ಸಭೆ ನಡೆಸಲಿದ್ದಾರೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.