ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ರಾಜ್ಯದ ಜನ ತೀರ್ಮಾನಿಸಿದ್ದು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರ ಪಕ್ಷದ ನಾಯಕರಿಗೇ ಅರಿವಾಗಿದೆ. ಇದೇ ಕಾರಣಕ್ಕೆ ಪದೇ ಪದೆ ಬಿಜೆಪಿ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ.ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು,ಮೋದಿ ಅವರು ಈ ದೇಶದ ಪ್ರಧಾನಮಂತ್ರಿಗಳು. ಅವರು ಎಷ್ಟು ಬಾರಿಯಾದರೂ ರಾಜ್ಯಕ್ಕೆ ಭೇಟಿ ನೀಡಬಹುದು. ಆದರೆ ಕರ್ನಾಟಕದ ಚುನಾವಣೆ ಸಮಯದಲ್ಲಿ ಪಕ್ಷದ ಪ್ರಚಾರಕ್ಕೆ ಹೆಚ್ಚು ಆಗಮಿಸುತ್ತಿದ್ದು, ಅವರ ಪಕ್ಷ ರಾಜ್ಯದಲ್ಲಿ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಅವರು ಈ ರೀತಿ ಎಲ್ಲ ಪ್ರಯತ್ನ ಮಾಡುತ್ತಾ ಪರೋಕ್ಷವಾಗಿ ಸೋಲನ್ನು ಒಪ್ಪಿಕೊಳ್ಳುತ್ತಿದ್ದಾರೆ. ರಾಜ್ಯದ ಜನರು ಪ್ರಜ್ಞಾವಂತರು. ಮೋದಿ ಅವರು ಎಷ್ಟು ಬಾರಿ ಬಂದರೂ ಜನ ಈಗಾಗಲೇ ಈ ಸರ್ಕಾರ ಕಿತ್ತೊಗೆಯಲು ತೀರ್ಮಾನ ಮಾಡಿದ್ದಾರೆ. ಬಿಜೆಪಿ ಪ್ರಚಾರಕ್ಕೆ ಜನ ಸೇರುತ್ತಿಲ್ಲ ಎಂದು ಚಿತ್ರ ನಟರನ್ನೂ ಪ್ರಚಾರಕ್ಕೆ ಕರೆಯುತ್ತಿದ್ದಾರೆ ಎಂದು ಕಿಡಿ ಕಾರಿದ್ರು