ಬಡತನರೇಖೆಗಿಂತ ಕೆಳಗಿರುವ(ಬಿಪಿಎಲ್) ಪಡಿತರಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ 5 ಕೆಜಿ ಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದ್ದು, ಏಪ್ರಿಲ್ 1ರಿಂದ ಜಾರಿಯಾಗುವಂತೆ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಇಂದು ಘೋಷಣೆ ಮಾಡಿದರು.
ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ಬಿಪಿಎಲ್ ಕುಟುಂಬಗಳಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ಇನ್ನು ಮುಂದೆ ಹೆಚ್ಚುವರಿಯಾಗಿ ಒಂದು ಕೆಜಿ ನೀಡಲಾಗುವುದು ಎಂದು ತಿಳಿಸಿದರು. ರಾಷ್ಟ್ರದಲ್ಲೇ ಕರ್ನಾಟಕ ಪ್ರಪ್ರಥಮವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ.
ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಮಗ್ರ ವಿವಿ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ವಿದೇಶದಲ್ಲಿರುವ ದೇಶಿ ಸಂಜಾತರ ಜ್ಞಾನವನ್ನು ಸ್ವದೇಶದಲ್ಲಿ ಬಳಸಿಕೊಳ್ಳಲು ಮರಳಿ ತಾಯ್ನಾಡಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ಸೂಕ್ತ ನೀತಿ ರಚನೆ ಮತ್ತು ಅನುದಾನ ಬಿಡುಗಡೆ ಮಾಡುವ ಆಶ್ವಾಸನೆಯನ್ನು ನೀಡಿದರು.
ತಮ್ಮ 30 ಪುಟಗಳ ಭಾಷಣದಲ್ಲಿ ಯಾವುದೇ ಹೊಸ ಯೋಜನೆಗಳನ್ನಾಗಿ ಅಥವಾ ಕಾರ್ಯಕ್ರಮಗಳನ್ನು ಘೋಷಣೆ ಮಾಡದ ರಾಜ್ಯಪಾಲರು, ರಾಜ್ಯ ಸರ್ಕಾರ ಕೋವಿಡ್ ನಿರ್ವಹಣೆಗಾಗಿ ನಡೆಸಿದ ಹೋರಾಟ ಹಾಗೂ ಜಾರಿಗೆ ತಂದಿರುವ ಕಾರ್ಯಕ್ರಮಗಳ ಅನುಷ್ಠಾನ ಹೊರತುಪಡಿಸಿದರೆ ಸರ್ಕಾರದ ಮುಂದುವರೆದ ಕಾರ್ಯಕ್ರಮಗಳನ್ನು ಮಾತ್ರ ಪ್ರಸ್ತಾಪಿಸಿದ್ದಾರೆ.
ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾದ ಹಿನ್ನೆಲೆಯಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕೋವಿಡ್ ರೋಗವು ಶೀಘ್ರದಲ್ಲೇ ಕೊನೆಗೊಳ್ಳುವ ಸಾಧ್ಯತೆಯಿದೆ. ಸರ್ಕಾರ ಇದನ್ನು ನಿವಾರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಇದೇ ರೀತಿ ನಾವು ಯಶಸ್ಸು ಕಾಣುತ್ತೇವೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.