ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರ ಕೆಲವೊಂದು ಕಠಿಣ ನಿಯಮ ಜಾರಿಗೆ ತರಲು ಉದ್ದೇಶಿಸಿದೆ. ಹೀಗಾಗಿ ಇನ್ನು ಮುಂದೆ ಕೆಲವರ ಬಿಪಿಎಲ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ. ಈ ಬಗ್ಗೆ ವಿವರ ಇಲ್ಲಿದೆ.
ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯನ್ನು ಹೊಂದಿದ್ದರೆ ತಕ್ಷಣವೇ ಆಯಾ ತಾಲೂಕು ಕಚೇರಿಯ ಆಹಾರ ಇಲಾಖೆಗೆ ಒಪ್ಪಿಸಬೇಕು. ಒಂದು ವೇಳೆ ಒಪ್ಪಿಸದೇ ಇದ್ದರೆ ಕಾನೂನು ಪ್ರಕಾರ ದಂಡ ಮತ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಡೆಸಲು ಮುಂದಾಗಿದೆ. ಗ್ಯಾರಂಟಿ ಯೋಜನೆಗಳ ಫಲ ಅರ್ಹರಿಗೆ ಮಾತ್ರ ಸಿಗುವಂತಾಗಲು ಮತ್ತು ಅನರ್ಹರಿಗೆ ಗ್ಯಾರಂಟಿ ಯೋಜನೆಯ ಫಲ ಸಿಕ್ಕಿ ಅನಗತ್ಯವಾಗಿ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
ಪಡಿತರ ಚೀಟಿಗೆ ಯಾರು ಅನರ್ಹರು
ಸರ್ಕಾರೀ ವೇತನ ಪಡೆಯುತ್ತಿರುವವರು, ಸರ್ಕಾರೀ ಸ್ವಾಮ್ಯದ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿಕೊಂಡು ವೇತನ ಪಡೆಯುತ್ತಿರುವವರು ಅನರ್ಹರು. ಆದಾಯ ತೆರಿಗೆ , ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವವರಿಗೆ ಅನರ್ಹರು. ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವವರು, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಹೊಂದಿರುವವರು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ವಾಣಿಜ್ಯ ವಾಹನ ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಮತ್ತು ವಾರ್ಷಿಕ ಆದಾಯ 1.20 ಲಕ್ಷಕ್ಕಿಂತ ಅಧಿಕವಿರುವ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹವಾಗಿರುತ್ತದೆ.