ಮಳೆ ಪೀಡಿತ ಪ್ರದೇಶಗಳಲ್ಲಿ ಕೂಡಲೇ ಸಮಾರೋಪಾದಿಯಲ್ಲಿ ಪರಿಹಾರ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಗೃಹ ಕಚೇರಿ ಕೃಷ್ಣಾದಲ್ಲಿ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಿಇಒಗಳು ಸೇರಿದಂತೆ ಮತ್ತಿತರ ಇಲಾಖೆ ಅಧಿಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ನಡೆಸಿದ ಅವರು, ಅಧಿಕಾರಿಗಳು ಸಮಾರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಬೇಕು. ಸರ್ಕಾರ ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಹೇಳಿದರು.
ವಿಶೇಷವಾಗಿ ಕರಾವಳಿ ತೀರಾಪ್ರದೇಶ, ಮಲೆನಾಡು, ಬೆಂಗಳೂರು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಹೆಚ್ಚು ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ವಿಳಂಬ ಮಾಡದೆ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚನೆ ಕೊಟ್ಟರು. ನದಿಪಾತ್ರ ಮತ್ತು ತಗ್ಗು ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವುದು, ಅಗತ್ಯವಿರುವ ಕಡೆ ಕಾಳಜಿ ಕೇಂದ್ರಗಳನ್ನು ಬಳಸಿಕೊಳ್ಳಬೇಕೆಂದು ಸೂಚನೆ ಕೊಟ್ಟರು.