ಬೆಂಗಳೂರು: ತಮ್ಮ ಮೇಲೆ ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯಗೆ ಇಂದು ಮಹತ್ವದ ದಿನವಾಗಿದೆ.
ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ಭವಿಷ್ಯ ಇಂದು ತೀರ್ಮಾನವಾಗಲಿದೆ.
ಮೈಸೂರಿನ ಕೇಸರೆ ಗ್ರಾಮದಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿನಲ್ಲಿದ್ದ ಮೂರೂವರೆ ಎಕರೆ ಜಮೀನನ್ನು ಮುಡಾ ವಶಕ್ಕೆ ಪಡೆದಿತ್ತು. ಇದಕ್ಕೆ ಬದಲಿಯಾಗಿ ಪಾರ್ವತಿಗೆ 14 ಸೈಟು ಮಂಜೂರು ಮಾಡಲಾಗಿತ್ತು. ತಮಗೆ ಬೇಕಾದ ಕಡೆ ಭೂಮಿ ಪಡೆಯಲು ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆ ಎಂದು ಆರೋಪವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಹಿ ಕೃಷ್ಣ ಪ್ರದೀಪ್, ಟಿಜೆ. ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿತ್ತು. ಈ ಹಿನ್ನಲೆಯಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಇಂದು ಮಧ್ಯಾಹ್ನ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗಾಗಿನ ವಿಶೇಷ ನ್ಯಾಯಪೀಠದಲ್ಲಿ ನ್ಯಾ. ನಾಗಪ್ರಸನ್ನ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ. ಸಿದ್ದರಾಮಯ್ಯ ಪರ ಅಭಿಷೇಕ್ ಮನು ಸಿಂಘ್ವಿ ಮತ್ತು ರಾಜ್ಯಪಾಲರ ಪರವಾಗಿ ಕೇಂದ್ರ ಸರ್ಕಾರದ ಸಾಲಿಸಿಟ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ.