ಕಾವೇರಿ ನದಿ ನೀರು ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನವದೆಹಲಿಗೆ ತೆರಳಿ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಅವರನ್ನು ಶ್ರಮಶಕ್ತಿ ಭವನದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು.
ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಆಕ್ಷೇಪಣೆ ಸಲ್ಲಿಸುವ ಕುರಿತು ಚರ್ಚಿಸಲಾಗಿತ್ತು. ಈ ವೇಳೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಉಮಾ ಭಾರತಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭರವಸೆ ನೀಡಿದ್ದಾರೆ.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್, ಕಾನೂನು ಸಚಿವ ಟಿ.ಬಿ.ಜಯಚಂದ್ರ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸಾಥ್ ನೀಡಿದರು.
ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 20 ರಂದು ಸುಪ್ರೀಂಕೋರ್ಟ್ ನೀಡಿರುವ ಆದೇಶ ಪಾಲಿಸಲು ಕಷ್ಟವಾಗುತ್ತದೆ ಎಂದು ತಿಳಿಸಿದರು.
ತಮಿಳುನಾಡು ಸರಕಾರ ಬೆಳೆಗಾಗಿ ನೀರು ಕೇಳುತ್ತಿದೆ. ಆದರೆ, ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಅಭಾವವಿದೆ. ನಮಗೆ ಕುಡಿಯಲು 27 ಟಿಎಂಸಿ ನೀರು ಬೇಕಾಗುತ್ತದೆ. ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿತ್ತು. ಆದರೆ, ಅವರ ಭೇಟಿಗೆ ಅವಕಾಶ ದೊರೆತಿಲ್ಲ ಎಂದು ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ