ಮುಂಗಾರು ಪ್ರವೇಶಕ್ಕೂ ಮೊದಲೇ ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಜನರು ಹೈರಾಣಾಗಿದ್ದಾರೆ. ಕಳೆದ 3-4 ದಿನಗಳಿಂದ ಎಡೆಬಿಡದೆ ಮಳೆಯಾಗುತ್ತಿದ್ದು, ಮೇ 21ರ ವರೆಗೂ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಮಳೆಯಬ್ಬರದಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಕೃಷಿ ಚಟುವಟಿಕೆಯೂ ಸ್ಥಗಿತಗೊಂಡಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಸಂಬಂಧಿ ಘಟನೆಗಳಿಂದ ಹಾಸನದ ಹೊಳೆನರಸೀಪುರ ತಾಲೂಕಿನಲ್ಲಿ ಯುವಕನೊಬ್ಬ ಮೃತಪಟ್ಟರೆ, ಬೆಂಗಳೂರಿನಲ್ಲಿ ಇಬ್ಬರು ಕಾರ್ಮಿಕರು ಅಸುನೀಗಿದ್ದಾರೆ. ಇನ್ಕನು ಇಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗಾಳಿ ಮತ್ತು ಸಿಡಿಲಿನೊಂದಿಗೆ ಭಾರೀ ಮಳೆ ಯಾಗುವ ಸಾಧ್ಯತೆಗಳಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆ ಗಳಲ್ಲಿ ಎಲ್ಲೋ ಮತ್ತು ಆರೆಂಜ್ ಅಲರ್ಟ್. ಬೆಂಗಳೂರು ಸುತ್ತಮುತ್ತ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.