ಆರೋಗ್ಯ ಇಲಾಖೆಗೆ ಶುಶ್ರೂಷಕರನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಈಗಾಗಲೇ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವವರಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಆರೋಗ್ಯ ಮತ್ತು ವೈದ್ಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಶುಶ್ರೂಷಕರ ಸೇವಾ ವಿಷಯಕ್ಕೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದರು.
ಖಾಯಂಗೆ ಕಾನೂನು ತೊಡಕು: ಆರೋಗ್ಯ ಇಲಾಖೆಯಲ್ಲಿ 889 ಶುಶ್ರೂಷಕರು ಗುತ್ತಿಗೆ ಆಧಾರದ ಮೇಲೆ ಹತ್ತು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಸೇವೆ ಕಾಯಂ ಮಾಡಲು ಕಾನೂನು ತೊಡಕು ಉಂಟಾಗುತ್ತದೆ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಶೀಘ್ರವೇ ಆರಂಭವಾಗುತ್ತದೆ. ಆ ಸಂದರ್ಭದಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವವರ ವಯಸ್ಸು ಮತ್ತು ಸೇವಾ ಅನುಭವಕ್ಕೆ ಆದ್ಯತೆ ನೀಡಿ ಎಂದು ಮುಖ್ಯಮಂತ್ರಿಗಳು ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.