ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ 5 ರಿಂದ 7ರವರೆಗೆ ಜರುಗಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ.
ಫೆಬ್ರವರಿ 5 ರಂದು ಬೆಳಿಗ್ಗೆ 11.30 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿನ ಶ್ರೀ ವಿಜಯ ಪ್ರಧಾನ ವೇದಿಕೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮೇಳನ ಉದ್ಘಾಟಿಸುವರು.
ಉಪಮುಖ್ಯಮಂತ್ರಿ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷ ಗೋವಿಂದ ಎಂ. ಕಾರಜೋಳ ಸ್ವಾಗತ ಕೋರುವರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ ಆಶಯ ನುಡಿಗಳನ್ನಾಡುವರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರು ನಿಕಟಪೂರ್ವ ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡುವರು.
ಹಿರಿಯ ಸಾಹಿತಿ ಹಾಗೂ ಚಿಂತಕ ಡಾ. ಎಚ್.ಎಸ್. ವೆಂಟಕೇಶಮೂರ್ತಿ ಅವರು ಸಮ್ಮೇಳನಾಧ್ಯಕ್ಷರ ಭಾಷಣ ಮಾಡುವರು. ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸುವರು.