ಕೊಪ್ಪಳ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನವು ರಾಜಕೀಯ ದುರುದ್ದೇಶ ಎಂದು ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ ಆರೋಪಿಸಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನವು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಆಗಿದೆ. ವಿರೋಧ ಪಕ್ಷಗಳ ನಾಯಕರನ್ನು ಮಾತ್ರ ಬಂಧಿಸಲಾಗುತ್ತಿದೆ. ಬಿಜೆಪಿಯಲ್ಲಿ ಅನೇಕ ನಾಯಕರು ಅವ್ಯವಹಾರ ಎಸಗಿದವರು ಇದ್ದಾರೆ. ಆದರೆ ಅವರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕಾನೂನು ಚೌಕಟ್ಟು ಮೀರಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸುವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪ್ರಮುಖ ಪಾತ್ರ ವಹಿಸಿದೆ ಎಂದು ಕಿಡಿಕಾರಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಬಂಧನದ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂಬ ಆರೋಪ ಸುಳ್ಳು. ಇದು ಕೇವಲ ಉಹಾಪೋಹ. ಇಂತಹ ಹೇಳಿಕೆ ನೀಡುವ ಮೂಲಕ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮಲ್ಲಿರುವ ಸಣ್ಣತನವನ್ನು ವ್ಯಕ್ತಪಡಿಸಿದ್ದಾರೆ. ಅವರು ದ್ವೇಷದ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.