ಬೆಂಗಳೂರು : ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಮಾಜಿ ಸಚಿವ ದಿನೇಶ್ ಗುಂಡುರಾವ್ ಅವರನ್ನು ಕಳೆದ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಜಿ. ಪರಮೇಶ್ವರ್ ಅವರಿಂದ ತೆರವಾದ ಕೆಪಿಸಿಸಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ 2018 ಜುಲೈ 4 ರಂದು ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.
ಆದರೆ ಇತ್ತೀಚೆಗೆ ಕಾಂಗ್ರೆಸ್ ಪಕ್ಷದಲ್ಲಿ ಆಗುತ್ತಿರುವ ದಿಢೀರ್ ಬೆಳವಣೆಗೆಯಿಂದ ಬೇಸರಗೊಂಡಿದ್ದರು. ಅಲ್ಲದೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲನುಭವಿಸಿದ ಹಿನ್ನಲೆಯಲ್ಲಿ ಈ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಲು ನಿರ್ಧರಿಸಿದ ದಿನೇಶ್ ಗುಂಡೂರಾವ್ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಇದೀಗ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಎಂ.ಬಿ. ಪಾಟೀಲ್ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.