ಬೆಂಗಳೂರು: ಕಾಂಗ್ರೆಸ್ ಶಾಸಕರನ್ನು ತಮ್ಮತ್ತ ಸೆಳೆಯಲು ಬಿಜೆಪಿ 50 ಕೋಟಿ ರೂ. ಆಫರ್ ನೀಡಿದ್ದಾರೆ ಎಂಬ ಆರೋಪ ಮಾಡಿದ್ದ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ನಿನ್ನೆ ಕಾರ್ಯಕ್ರಮವೊಂದದರಲ್ಲಿ ಮಾತನಾಡುವಾಗ ಸಿಎಂ ಸಿದ್ದರಾಮಯ್ಯ ಬಿಜೆಪಿ ಆಪರೇಷನ್ ಕಮಲದ ಬಗ್ಗೆ ಗಂಭೀರ ಆರೋಪ ಮಾಡಿದ್ದರು. ಬಿಜೆಪಿಯವರು ಹೇಗಾದರೂ ಮಾಡಿ ನಮ್ಮ ಸರ್ಕಾರ ಉರುಳಿಸಬೇಕು ಎಂದು ಪ್ರಯತ್ನ ನಡೆಸುತ್ತಿದ್ದಾರೆ. ನಮ್ಮ ಶಾಸಕರಿಗೆ 50 ಕೋಟಿ ರೂ. ಆಫರ್ ನೀಡಿದ್ದರು. ಅದು ಸಫಲರಾಗದೇ ಇದ್ದಾಗ ನನ್ನ ಮೇಲೆ ಸುಳ್ಳು ಕೇಸ್ ಹಾಕಿ ಅಲುಗಾಡಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು.
ಸಿದ್ದರಾಮಯ್ಯ ಆರೋಪಕ್ಕೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಹೌದು. ಬಿಜೆಪಿಯವರು ನಮ್ಮ ಶಾಸಕರಿಗೆ ಹಣದ ಆಮಿಷವೊಡ್ಡಿ ಖರೀದಿಸಲು ಪ್ರಯತ್ನ ಮಾಡಿದ್ದಾರೆ. ಆ ಕಾಂಗ್ರೆಸ್ ಶಾಸಕರು ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಅದನ್ನೇ ಮುಖ್ಯಮಂತ್ರಿಗಳು ನಿಮಗೆ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಇನ್ನಷ್ಟು ಹೇಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಚಿವ ರಾಜಣ್ಣ ಕೂಡಾ ಸಿದ್ದರಾಮಯ್ಯನವರೇ ಹೇಳಿದ್ದಾರೆ ಎಂದರೆ ಅದು ಸತ್ಯವಿರಲೇಬೇಕು ಎಂದಿದ್ದಾರೆ. ಆದರೆ ಸಚಿವ ಸತೀಶ್ ಜಾರಕಿಹೊಳಿ 50 ಕೋಟಿ ಆಫರ್ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.