ಕಾವೇರಿ ನೀರಿಗೆ ಸಂಬಂಧಿಸಿ ತಮಿಳುನಾಡು ಮತ್ತು ಕರ್ನಾಟಕ ಈಗಾಗಲೇ ಸಲ್ಲಿಸಿದ್ದ ತಕರಾರು ಅರ್ಜಿಗಳ ಜತೆಗೆ ಇದೀಗ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತ ಸಂಘಟನೆಗಳು ಕೂಡ ಪ್ರತ್ಯೇಕ ಅರ್ಜಿ ಸಲ್ಲಿಸಿವೆ. ಆದರೆ ಈ ಹಿಂದೆ ನಿಗದಿಪಡಿಸಿದಂತೆ ಈ ಅರ್ಜಿಗಳ ವಿಚಾರಣೆ ಸೆ.11ರಂದು ವಿಚಾರಣೆಗೆ ಬರುವ ನಿರೀಕ್ಷೆ ಇದೆ.ಈವರೆಗೆ ಸಂಕಷ್ಟದ ಸಮಯದಲ್ಲೂ ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಹೋರಾಟ ನಡೆಸುತ್ತಿದ್ದ ರೈತ ಸಂಘಟನೆಗಳು ಇದೀಗ ಒಂದಾಗಿ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಅದರ ಭಾಗವಾಗಿ ಇದೀಗ ಸುಪ್ರೀಂಕೋರ್ಚ್‌ಗೆ ಅರ್ಜಿ ಸಲ್ಲಿಸಿವೆ. ನಾವು ಬೆಳೆಗಾಗಿ ಅಲ್ಲ, ಕುಡಿಯುವ ನೀರಿಗೆ ಆದ್ಯತೆ ಕೊಡಿ ಎಂದು ಕೇಳುತ್ತಿದ್ದೇವೆ. ಆದರೆ ತಮಿಳುನಾಡು ಕುರುವೈ ಬೆಳೆಗೆ ನೀರು ಕೇಳುತ್ತಿದೆ. ಮಂಡ್ಯ, ಮೈಸೂರು ಸುತ್ತಮುತ್ತ ಮೂರು ದಿನಕ್ಕೊಮ್ಮೆ ಕುಡಿಯಲು ನೀರು ಬಿಡಲಾಗುತ್ತಿದೆ ಎಂದು ರೈತ ಸಂಘಟನೆಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.