ಅರಸೀಕೆರೆ: ಲೋಕಸಭೆ ಚುನಾವಣೆ ಹಿನ್ನೆಲೆ ಅರಸೀಕೆರೆಯಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ವಿದ್ಯಾರ್ಥಿನಿಯೊಬ್ಬಳು ಉಚಿತ ಬಸ್ ಟಿಕೆಟ್‌ಗಳ ಮಾಲೆ ಹಾಕಿ ಕೃತಜ್ಞತೆ ಸಲ್ಲಿಸಿದರು.
ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಅರಸೀಕೆರೆಯ ವಿದ್ಯಾರ್ಥಿನಿ ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು, ಬಹುಷ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ?
ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ನನ್ನ ಕಡೆ ಏದುಸಿರುಬಿಡುತ್ತಾ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್ ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ಹೇಳಿದಳು.
ನೀವು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ನಾನು ಕಾನೂನು ವ್ಯಾಸಂಗವನ್ನು ಸುಗಮವಾಗಿ ನಡೆಸುವಂತಾಗಿದೆ. ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್ ಗಳನ್ನು ಸಂಗ್ರಹಿಸಿಟ್ಟಿದೆ. ನೀವು ಇಲ್ಲಿ ಬರುವುದು ಗೊತ್ತಾಗಿ ಅವುಗಳನ್ನು ಮಾಲೆ ಕಟ್ಟಿ ತಂದೆ ಎಂದು ಹೇಳಿದ ಅವಳ ಮಾತುಗಳಲ್ಲಿ ಕೃತಜ್ಞತೆಯೂ ಇತ್ತು, ಸರ್ಕಾರದ ಬಗ್ಗೆ ಹೆಮ್ಮೆಯೂ ಇತ್ತು.
ಕಾನೂನು ವ್ಯಾಸಂಗ ಮುಗಿಸಿ ಒಳ್ಳೆಯ ವಕೀಲಳಾಗಿ ಸಮಾಜದ ಸೇವೆ ಮಾಡು, ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಆರೋಪಮಾಡುವ ದಾರಿ ತಪ್ಪಿದ ಜನರಿಗೆ ಸರಿಯಾದ ದಾರಿ ತೋರಿಸುವವಳಾಗು' ಎಂದು ಹಾರೈಸಿದೆ.<>