ಬಿಜೆಪಿ ಪಕ್ಷದ ಹಿರಿಯ ನಾಯಕರ ನಿರ್ಲಕ್ಷ್ಯಧೋರಣೆಯಿಂದ ಬೇಸತ್ತು ಮಾಜಿ ಸಂಸದ ಸಿ.ಎಚ್.ವಿಜಯ್ ಶಂಕರ್ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾಜಿ ಸಂಸದ ವಿಜಯ್ ಶಂಕರ್ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ.
ಮಾಜಿ ಸಂಸದ, ಮಾಜಿ ಸಚಿವ ವಿಜಯ್ ಶಂಕರ್ ಮೈಸೂರು ಲೋಕಸಭೆ ಕ್ಷೇತ್ರದಿಂದ ಎರಡು ಬಾರಿ ಜಯಗಳಿಸಿ ಸಂಸದರಾಗಿದ್ದರು. ಆದರೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲು ಬಿಜೆಪಿ ನಿರಾಕರಿಸಿ, ಹಾಸನದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿತ್ತು. ಚುನಾವಣೆಯಲ್ಲಿ ಎದುರಾಳಿ ದೇವೇಗೌಡರ ಎದುರು ಪರಾಭವಗೊಂಡಿದ್ದರು.
ರಾಜ್ಯ ಬಿಜೆಪಿ ರೈತ ಮೋರ್ಚಾದ ರಾಜ್ಯಾಧ್ಯಕ್ಷರಾಗಿರುವ ವಿಜಯ್ ಶಂಕರ್ ತಮ್ಮ ಕ್ಷೇತ್ರದಲ್ಲಿ ಫ್ರಭಾವಿ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ, ನಿರಂತರವಾಗಿ ಹಿರಿಯ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ ಎಂದು ಅವರ ಬೆಂಬಲಿಗರು ತಿಳಿಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ವದಂತಿಗಳು ಕೇಳಿಬರುತ್ತಿವೆ. ಆದರೆ. ವಿಜಯ್ ಶಂಕರ್ ತಾವು ಯಾವ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಬಗ್ಗೆ ಬಹಿರಂಗ ಹೇಳಿಕೆ ನೀಡಿಲ್ಲ. ವಿಜಯ್ ಶಂಕರ್ ಅವರಿಗೆ ಜೆಡಿಎಸ್, ಕಾಂಗ್ರೆಸ್ ಎರಡೂ ಪಕ್ಷಗಳು ಆಹ್ವಾನ ನೀಡಿವೆ ಎನ್ನುವ ವರದಿಗಳು ಹರಡಿವೆ,.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.