ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಲಾರಿಗೆ ಕಾರು ಹಾಗೂ ಇತರ ಲಾರಿಗಳು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ರೈತರು ಮೃತಪಟ್ಟಿದ್ದಾರೆ.
ಗದಗ ಜಿಲ್ಲೆಯ ಹುಯಿಲುಗೊಳದ ಹನುಮಪ್ಪ ಕಳಕಪ್ಪ ಹುನಗುಂದಿ (30), ಗುರಪ್ಪಾ ಹುಗರ್ (26), ರಮೇಶ್ (28), ಪ್ರಾಶಂತ್ ಹಟ್ಟಿ (36) ಮೃತರು.
ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಲ್ಟಿಯಾದ ಲಾರಿಯಿಂದ ಈರುಳ್ಳಿ ಬಿದ್ದು ಹೆದ್ದಾರಿ ತುಂಬ ಹರಡಿವೆ.
ಚಿತ್ರದುರ್ಗ ಕಡೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಈರುಳ್ಳಿ ತುಂಬಿದ ಲಾರಿಯ ಟೈರ್ ಸ್ಫೋಟಗೊಂಡು ಪಲ್ಟಿ ಆಗಿದೆ. ಹಿಂಬದಿಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಬಳಿಕ ಇದಕ್ಕೆ ಮತ್ತೊಂದು ಕಾರು ಮತ್ತು ಲಾರಿಗಳು ಡಿಕ್ಕಿಯಾಗಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದ್ದರಿಂದ ಸಂಚಾರ ಸಮಸ್ಯೆ ಸೃಷ್ಟಿಯಾಗಿತ್ತು. ಒಂದು ಕಿ.ಮೀ ದೂರದವರೆಗೂ ವಾಹನಗಳು ನಿಂತಿದ್ದವು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಡಿವೈಎಸ್ಪಿ ರೋಷರ್ ಜಮೀರ್, ಸಿಪಿಐ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.