ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಶೀಘ್ರವೇ ಶಾಲಾ ಮಕ್ಕಳ ಬಿಸಿಯೂಟದಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ನೀಡಲು ನಿರ್ಧರಿಸಿದೆ ಎನ್ನಲಾಗಿದೆ. ಶಾಲಾ ಮತ್ತು ಶಿಕ್ಷಣ ಸಾಕ್ಷರತಾ ಇಲಾಖೆ ಶಾಲಾ ಮಕ್ಕಳಿಗೆ ಬಿಸಿಯೂಟದಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ನೀಡುವ ಕುರಿತಂತೆ ಚಿಂತನೆ ನಡೆಸಿದ್ದು, ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಂಡು ಯೋಜನೆ ಆರಂಭಿಸಲಿದೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ 1 ರಿಂದ 10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶದ ಆಹಾರ ನೀಡುವ ಉದ್ದೇಶದಿಂದ ಪ್ರಾದೇಶಿಕತೆ ಅನುಗುಣವಾಗಿ ಉತ್ತರ ಕರ್ನಾಟಕ ಭಾಗದ ಮಕ್ಕಳಿಗೆ ಜೋಳದ ರೊಟ್ಟಿ, ದಕ್ಷಿಣ ಕರ್ನಾಟಕ ಭಾಗದ ಮಕ್ಕಳಿಗೆ ರಾಗಿ ಮುದ್ದೆ ನೀಡುವ ಕುರಿತು ಸಿದ್ಧತೆ ಕೈಗೊಂಡಿದ್ದು, ಶೀಘ್ರವೇ ಯೋಜನೆ ಆರಂಭವಾಗಲಿದೆ ಎಂಬುದು ಉನ್ನತ ಮೂಲಗಳಿಂದ ತಿಳಿದುಬಂದಿದೆ.