ಬೆಂಗಳೂರು:-ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ರಾಜ್ಯ ಸರಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಸೋಂಕು ನಿಯಂತ್ರಣ ಸಲುವಾಗಿ ಕನ್ನಡ ರಾಜ್ಯೋತ್ಸವವನ್ನು 500 ಜನರಿಗೆ ಮಿತಿಗೊಳಿಸಿ, ಸರಳವಾಗಿ ಮತ್ತು ಗೌರವ ಪೂರ್ವಕವಾಗಿ ಆಚರಿಸಲು ಸೂಚಿಸಿದೆ.
ಕನ್ನಡ ರಾಜ್ಯೋತ್ಸವ ಆಚರಣೆಯ ವೇಳೆ ರಾಜ್ಯಾದ್ಯಂತ ಧ್ವಜಾರೋಹಣ ಸ್ಥಳದಲ್ಲಿ ವ್ಯಕ್ತಿಗತ ಅಂತರ, ಮಾಸ್ಕ್ ಬಳಕೆ ಮತ್ತು ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಬೇಕು. ವ್ಯಕ್ತಿಗತ ಅಂತರವಿಲ್ಲದೇ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ರಾಜ್ಯೋತ್ಸವ ಆಚರಣೆಯು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಗೌರವಪೂರ್ವಕವಾಗಿ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು.
ರಾಜ್ಯದಲ್ಲಿನ ಸಂಘ-ಸಂಸ್ಥೆಗಳು ರಾಜ್ಯೋತ್ಸವ ಆಚರಣೆಗೆ ಪೊಲೀಸ್ / ಮಹಾನಗರ ಪಾಲಿಕೆ / ಸ್ಥಳೀಯ ಆಡಳಿತ ಸಂಸ್ಥೆ / ವಿದ್ಯುತ್ ಇಲಾಖೆ / ಆರೋಗ್ಯ ಇಲಾಖೆ / ಅಗ್ನಿಶಾಮಕ ಇಲಾಖೆ / ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಇತರೆ ಸಂಬಂಧಪಟ್ಟ ಇಲಾಖೆಗಳಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು. ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗುವ ಸಾಂಸ್ಕೃತಿಕ ಮನರಂಜನಾ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಕನಿಷ್ಠ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಸಾರ್ವಜನಿಕರ ಆರೋಗ್ಯ, ಹಿತದೃಷ್ಟಿಯಿಂದ ಸಣ್ಣ ಮಕ್ಕಳು, ಹಿರಿಯ ನಾಗರಿಕರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರು ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಎಚ್ಚರವಹಿಸುವುದು.
ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟು ನಿಟ್ಟಾಗಿ ಪಾಲಿಸಬೇಕು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮಹಾನಗರ ಪಾಲಿಕೆ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯಾಡಳಿತ ಸಂಸ್ಥೆ /ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ / ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರದ ಆದೇಶ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರಗಿಸಲಾಗುವುದು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.