ಬೆಳಗಾವಿ : ರಾಜ್ಯದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ.
ಇಂದು ಪ್ರವಾಹ ಪೀಡಿತ ಪ್ರದೇಶದಲ್ಲಿ ಪ್ರದಕ್ಷಿಣೆ ಹಾಕುತ್ತಿರುವ ಸಿಎಂ ಯಡಿಯೂರಪ್ಪ ಅವರು ಮುಂದಿನ 3 ದಿನಗಳಲ್ಲಿ ಇಲ್ಲೇ ಇರುತ್ತೇವೆ. ಸುಮಾರು 4 ತಂಡಗಳಲ್ಲಿ ಭೇಟಿ ನೀಡಲಿದ್ದೇವೆ. ನಾಯಕರಾದ ಕೆಎಸ್ ಈಶ್ವರಪ್ಪ, ಜಗದೀಶ್ ಶೆಟ್ಟರ್, ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಈ ಭಾಗದ ಪ್ರವಾಹ ಉಂಟಾಗಿರುವ ಕೇಂದ್ರಗಳಿಗೆ ಭೇಟಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬೆಳಗಾವಿ ನಗರದಲ್ಲಿ ತೆರೆಯಲಾಗಿರುವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಅವರು ಬೆಳಗಾವಿ ಜಿಲ್ಲೆಯಲ್ಲಿ 106 ಗ್ರಾಮಗಳು ಜಲಾವೃತಗೊಂಡಿದ್ದು, ಜನ, ಜಾನುವಾರುಗಳ ರಕ್ಷಣೆಗೆ ಸರ್ಕಾರ ಆದ್ಯತೆ ನೀಡಲಿದೆ. ನಾಳೆ ಹೆಚ್ಚುವರಿ ಸೇನೆಯ ತುಕಡಿಗಳನ್ನು ನಿಯೋಜಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.