ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಇದೀಗ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲು ಹೊರಟಿದೆ. ಈ ನಡುವೆ ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ಮುಂದಿನ ಚುನಾವಣೆಯಲ್ಲಿ ಮೋದಿ ಮತ್ತೊಮ್ಮೆ ಗೆದ್ದು ಪ್ರಧಾನಿ ಆಗೇ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದಾರೆ. ನಿನ್ನೆ ಗೃಹಸಚಿವ ಅಮಿತ್ ಶಾ ಮೈಸೂರಿಗೆ ಭೇಟಿ ನೀಡಿ ಜೆಡಿಎಸ್ ಜೊತೆಗಿನ ಮೈತ್ರಿ ಧರ್ಮ ಪಾಲಿಸಿ ಎಂದು ಖಡಕ್ ಸಂದೇಶ ನೀಡಿದ ಬೆನ್ನಲ್ಲೇ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ.
ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ
ಹಾಸನದಿಂದ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಬಗ್ಗೆ ಕುಮಾರಸ್ವಾಮಿ ಇದೇ ವೇಳೆಗೆ ಸುಳಿವು ನೀಡಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಕೆಲವೊಂದು ಸಮಸ್ಯೆಗಳಿವೆ. ಆದರೆ ಅದೆಲ್ಲವನ್ನೂ ಸರಿಪಡಿಸಿಕೊಂಡು ಹೋಗಲಾಗುವುದು ಎಂದಿದ್ದಾರೆ. ಹಾಸನ ಜಿಲ್ಲೆಯಲ್ಲೂ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು ಎನ್ನುವ ಮೂಲಕ ಈ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯೇ ಕಣಕ್ಕಿಳಿಯುವುದಾಗಿ ಸುಳಿವು ನೀಡಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ವಾಗ್ದಾಳಿ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧವೂ ಅವರು ಈ ವೇಳೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಯಿಂದ ಕೆಲವು ಕುಟುಂಬಗಳು ಬೀದಿ ಪಾಲಾಗಿವೆ ಎಂದು ಆರೋಪಿಸಿದ್ದಾರೆ. ಗ್ಯಾರಂಟಿಯಿಂದ ಜನ ನೆಮ್ಮದಿ ಕಳೆದುಕೊಂಡಿದ್ದಾರೆ. ಜನ ಕೆಲಸ ಇಲ್ಲದೇ ಒಂದು ತುತ್ತಿನ ಊಟಕ್ಕೆ ಪರದಾಡುವ ಸ್ಥಿತಿ ಬಂದಿದೆ. ಉತ್ತರ ಕರ್ನಾಟಕದ ಯುವಕ ಬಡತನದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವಾಗ್ದಾಳಿ ನಡೆಸಿದ್ದಾರೆ.