ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 10ರಿಂದ 12ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ರಾಜ್ಯ ಹವಾಮಾನ ಕೇಂದ್ರ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ ಬರುವ ಭಾನುವಾರದಿಂದ ಮಂಗಳವಾರದವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗುವ ಮುನ್ಸೂಚನೆ ಇದೆ ಆದ್ದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ರಾಜಧಾನಿಯಲ್ಲಿ ಎರಡು ಮೂರು ದಿನ ಮಳೆ:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡರಿಂದ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರದ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ.