ಬೆಂಗಳೂರು: ಕೆಲ ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ ಶಿಕ್ಷೆ ವಿಧಿಸುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ, ಮಕ್ಕಳ ಮೇಳದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಖಾಸಗಿ ಇಂಗ್ಲಿಷ್ ಶಾಲೆಗಳು ಐಸಿಐಸಿ, ಸಿಬಿಎಸ್‍ಸಿ ಶಾಲೆಗಳಲ್ಲಿ ಕನ್ನಡ ಕಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇತ್ತೀಚೆಗೆ ಕೆಲ ಖಾಸಗಿ ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ ದಂಡ ವಿಧಿಸಲಾಗುತ್ತಿದೆ ಎನ್ನುವ ಮಾತು ಕೇಳಿಬರುತ್ತಿವೆ. ಕನ್ನಡ ವಿರೋಧಿ ನಿಲುವನ್ನು ಸರ್ಕಾರ ಸಹಿಸುವುದಿಲ್ಲ. ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.
ಯಾವುದೇ ಭಾಷೆ ಕಲಿಯಿರಿ. ಆದರೆ ಕನ್ನಡವನ್ನೇ ಕಲಿಯದಿರುವುದು ಕನ್ನಡ ನಾಡಿಗೆ ಮಾಡುವ ಅವಮಾನ. ಮೊದಲು ಕನ್ನಡಿಗ ನಂತರ ಭಾರತೀಯ ಎಂಬ ಭಾವನೆ ಪ್ರತಿಯೊಬ್ಬ ಕನ್ನಡಿಗರಲ್ಲಿ ಮೂಡಬೇಕು. ನಮ್ಮ ಬದುಕಿನ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ಇರಬೇಕು ಎಂದರು.