ಸಚಿವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನೂರಾರು ಕೋಟಿ ರೂಪಾಯಿ ಅಕ್ರಮ ಸಂಪತ್ತನ್ನು ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಇಡೀ ಘಟನೆಯ ವಿವರ ಕೇಳಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿದ ಸಣ್ಣ ಕೈಗಾರಿಕಾ ಖಾತೆ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಪರಮೇಶ್ವರ್ ಅವರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ, ಇಡೀ ಘಟನೆಯ ಹಿಂದೆ ರಾಜಕೀಯ ಷಡ್ಯಂತ್ರ ಇದ್ದು, ನಾನೀಗ ಯಾವುದೇ ವಿವರ ನೀಡುವ ಸ್ಥಿತಿಯಲ್ಲಿ ಇಲ್ಲ ಎಂದಿದ್ದಾರೆ.
ರಮೇಶ್ ಜಾರಕಿಹೊಳಿ ಹಾಗೂ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬಾಳ್ಕರ್ ಸೇರಿದಂತೆ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ಜನೆವರಿ 19 ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಬೆಳಗಾವಿ ನಗರದಲ್ಲಿರುವ ಲಕ್ಷ್ಮೀ ಹೆಬಾಳ್ಕರ್, ಗೋಕಾಕ್ ಪಟ್ಟಣದಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ, ಸಹೋದರ ಲಖನ್ ಜಾರಕಿಹೊಳಿ, ಆಪ್ತ ಅಲಿ ಅತ್ತಾರ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಾವೇದ್ ಮುಲ್ಲಾ ನಿವಾಸದ ಮೇಲೆ ದಾಳಿ ನಡೆದಿತ್ತು.
ಕಾರ್ಖಾನೆಗಳ ವ್ಯವಹಾರ ಹಾಗೂ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ