ಕಲಬುರಗಿ ವಿಭಾಗದ ಕಲಬುರಗಿ, ಬೀದರ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ 70 ಗ್ರಾಮ ಪಂಚಾಯಿತಿಗಳಲ್ಲಿ ಕಿಯೋಸ್ಕ್ ಯಂತ್ರಗಳನ್ನು ಅಳವಡಿಸುವ ಯೋಜನೆಯನ್ನು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿವತಿಯಿಂದ ಹಮ್ಮಿಕೊಳ್ಳಲಾಗಿದೆ.
ಹೈದ್ರಾಬಾದ್ ಕರ್ನಾಟಕ ಪ್ರದೇಶ ವ್ಯಾಪ್ತಿಯ ಆಯ್ದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ನವೆಂಬರ್ ಅಂತ್ಯದೊಳಗಾಗಿ ಕಿಯೋಸ್ಕ್ ಯಂತ್ರಗಳನ್ನು ಅಳವಡಿಸಿ ಅವು ಕಾರ್ಯನಿರ್ವಹಿಸುವಂತಾಗಬೇಕು ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಸೂಚಿಸಿದರು.
ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಲಬುರಗಿ ವಿಭಾಗದ ಗ್ರಂಥಾಲಯ ಅಧಿಕಾರಿಗಳ ಹಾಗೂ ಮೇಲ್ವಿಚಾರಕರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಕಲಬುರಗಿ ಜಿಲ್ಲೆಯಲ್ಲಿ 35, ಬೀದರ ಜಿಲ್ಲೆಯಲ್ಲಿ 15, ಯಾದಗಿರಿ ಜಿಲ್ಲೆಯಲ್ಲಿ 15 ಹಾಗೂ ರಾಯಚೂರು ಜಿಲ್ಲೆಯಲ್ಲಿ 5 ಗ್ರಾಮ ಪಂಚಾಯಿತಿಗಳಲ್ಲಿ ಪ್ರಾಯೋಗಿಕವಾಗಿ ಕಿಯೋಸ್ಕ್ ಯಂತ್ರಗಳನ್ನು ಅಳವಡಿಸಲಾಗುತ್ತಿದೆ ಎಂದರು.
ಕಿಯೋಸ್ಕ್ ಯಂತ್ರಗಳನ್ನು ಅಳವಡಿಸಲು ಉದ್ದೇಶಿಸಿರುವ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಮುಂದಿನ 7 ದಿನದೊಳಗಾಗಿ ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಇದಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿಗೆ 7500 ರೂ.ಗಳನ್ನು ನೀಡಲಾಗಿದೆ. ಗ್ರಂಥಾಲಯ ಅಧಿಕಾರಿಗಳು ಮುತುವರ್ಜಿವಹಿಸಿ ಯೋಜನೆಯನ್ನು ಯಶಸ್ವಿಗೊಳಿಸಬೇಕು. ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ದೂರವಾಣಿ ಹಾಗೂ ಇಂಟರ್‍ನೆಟ್ ಸಂಪರ್ಕ ಕಲ್ಪಿಸಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಕಿಯೋಸ್ಕ್ ಯಂತ್ರದ ಮೂಲಕ ಗ್ರಾಮೀಣ ಪ್ರದೇಶದ ಜನರು ಎಲ್ಲ ಮಾಹಿತಿಗಳನ್ನು ಪಡೆಯಲು ಸಾಧ್ಯವಾಗುತ್ತದೆ. ದಾಖಲೆಗಳ ಜಿರಾಕ್ಸ್ ಮತ್ತು ಪ್ರಿಂಟ್ ಸಲುವಾಗಿ ಅಲ್ಪ ಪ್ರಮಾಣದ ಶುಲ್ಕ ಪಡೆಯುವ ಮೂಲಕ ಯಂತ್ರ ಮತ್ತು ಇತರೆ ಉಪಕರಣಗಳ ನಿರ್ವಹಣೆ ಮಾಡಬಹುದಾಗಿದೆ ಎಂದರು.