ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಜೋಕರ್‌ನಂತೆ ವರ್ತಿಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯದಲ್ಲಿ ಕೈ ಸರಕಾರ ಬಂದ ಮೇಲೆ ದಕ್ಷಿಣ ಭಾರತದಲ್ಲಿಯೇ ಕರ್ನಾಟಕ ಅಸುರಕ್ಷಿತ ರಾಜ್ಯ ಎಂಬ ಕುಖ್ಯಾತಿಗೆ ಗುರಿಯಾಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಗೃಹ ಸಚಿವರಿಗೆ ಬೆಲೆಕೊಡುತ್ತಿಲ್ಲ. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಿ.ಶಿಖಾ ಸೇರಿದಂತೆ ಇತರ ಅಧಿಕಾರಿಗಳನ್ನು ಕೀಳು ಮಟ್ಟದಿಂದ ನೋಡುತ್ತಿದ್ದಾರೆ. ರಾಜ್ಯ ಸರಕಾರದ ದರ್ಪ ಮಿತಿ ಮೀರಿದೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರ ಕಗ್ಗೊಲೆ ನಡೆಯುತ್ತಿದೆ. ಕೊಲೆ ಆರೋಪಿಗಳಿಗೆ ಖುದ್ದು ಸಿಎಂ ರಕ್ಷಣೆ ಕೊಡುತ್ತಿದ್ದಾರೆ. ಹಾಡುಹಗಲೇ ನಡೆದ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಆಗ ಸತ್ಯಾಸತ್ಯತೆ ಹೊರಬರಲಿದೆ ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ