Publish Date: Mon, 17 Apr 2023 (08:28 IST)
Updated Date: Mon, 17 Apr 2023 (11:31 IST)
ಬೆಂಗಳೂರು : ಸಾಕಷ್ಟು ರಾಜಕೀಯ ಹೈಡ್ರಾಮಾಗಳ ನಡುವೆ ಕೊನೆಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕೈ ಹಿಡಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶೆಟ್ಟರ್ ಕಾಂಗ್ರೆಸ್ ಸೇರಿದರು. ಮಲ್ಲಿಕಾರ್ಜುನ ಖರ್ಗೆ ಅವರು ಶೆಟ್ಟರ್ಗೆ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್ ನೀಡದ್ದಕ್ಕೆ ಶೆಟ್ಟರ್ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು. ಬಿಜೆಪಿ ಹಿರಿಯ ನಾಯಕರು ಮನವೊಲಿಸಲು ಎಷ್ಟೇ ಪ್ರಯತ್ನ ಮಾಡಿದರೂ ಹಠ ಬಿಡಲಿಲ್ಲ. ಕೊನೆಗೆ ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಸೋಮವಾರ ಬೆಳಗ್ಗೆ ಲಿಂಗಾಯತ ಸಮುದಾಯದ ನಾಯಕರೇ ಆಗ ಎಂ.ಬಿ.ಪಾಟೀಲ್ ಅವರು ಸ್ಕೈ ಗಾರ್ಡನ್ ಅಪಾರ್ಟ್ಮೆಂಟ್ಗೆ ತೆರಳಿ ಶೆಟ್ಟರ್ ಅವರನ್ನು ತಮ್ಮ ವಾಹನದಲ್ಲಿ ಕೆಪಿಸಿಸಿ ಕಚೇರಿಗೆ ಕರೆತಂದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.