ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್, ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸತೀಶ್ ಜಾರಕಿಹೊಳಿ ಈ ಹಿಂದೆ ಜನತಾ ಪಕ್ಷದಲ್ಲೇ ಇದ್ದವರು. ಇವರು ಮರಳಿ ಪಕ್ಷಕ್ಕೆ ಬಂದರೇ ಸ್ವಾಗತಿಸುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ರಾಜ್ಯದ ಹಲವು ನಾಯಕರು ಜೆಡಿಎಸ್ ಪಕ್ಷಕ್ಕೆ ಬರಲು ಸಿದ್ಧವಿದ್ದಾರೆ. ಯಾರನ್ನು ಜೆಡಿಎಸ್ ಪಕ್ಷಕ್ಕೆ ಸೇರಿ ಎಂದು ಒತ್ತಾಯ ಮಾಡಲ್ಲ ಎಂದು ತಿಳಿಸಿದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ಅಧಿಕಾರದ ಗದ್ದುಗೆ ಹಿಡಿಯಲೇ ಬೇಕು ಎಂದು ಪಣ ತೊಟ್ಟಿರುವ ಜೆಡಿಎಸ್, ಸಚಿವ ಸ್ಥಾನ ಕಳೆದುಕೊಂಡು ಅಸಮಾಧಾನಗೊಂಡಿರುವ ಕಾಂಗ್ರೆಸ್ ನಾಯಕರಾದ ಶ್ರೀನಿವಾಸ್ ಪ್ರಸಾದ್, ರೆಬಲ್ ಸ್ಟಾರ್ ಅಂಬರೀಶ್, ಸತೀಶ್ ಜಾರಕಿಹೊಳಿ ಹಾಗೂ ಹಿಂದುಳಿದ ವರ್ಗದ ನಾಯಕ ಸಿಎಂ ಇಬ್ರಾಹಿಂ ಅವರನ್ನು ಸೆಳೆಯಲು ಕಸರತ್ತು ನಡೆಸುತ್ತಿದೆ.
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕಳೆದುಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಪ್ರಸಾದ್ ತಮ್ಮ ಶಾಸಕ ಸ್ಥಾನಕ್ಕೆ ಅ.17 ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಪ್ರಸಾದ್ ಜೆಡಿಎಸ್ ಪಕ್ಷ ಸೇರ್ಪಡೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ