ಕಳಸಾ ಬಂಡೂರಿ ಹಾಗೂ ಮಹದಾಯಿ ಜಲ ವಿವಾದವನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಡುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಲ್ಲಿ ಜಂಟಿ ಸರ್ವೆ ಆರಂಭವಾಗಿದೆ. ಮೈಸೂರು ಜಿಲ್ಲೆಯಲ್ಲಿ 51 ಸಾವಿರ ಎಕರೆ ಪ್ರದೇಶ ಪಾಳು ಬಿದ್ದಿದೆ. ಈಗಾಗಲೇ 4.51 ಲಕ್ಷ ಎಕರೆ ಪ್ರದೇಶಕ್ಕೆ ನೀರು ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು.
ಮಳೆ ಕೊರತೆಯಿಂದ ರಾಜ್ಯ ಬರಗಾಲ ಪರಿಸ್ಥಿತಿ ಎದುರಿಸುತ್ತಿದೆ. ಹೀಗಾಗಿ ರಾಜ್ಯದ ಒಟ್ಟು 110 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಗುರುತಿಸಲಾಗಿದೆ. ಇನ್ನೂ ಹಲವು ತಾಲೂಕಿನಲ್ಲಿ ಸರ್ವೆ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಕಾವೇರಿ ಕಣಿವೆಯ ರೈತರಿಗೆ ಪರಿಹಾರ ಕೊಡುವ ಕುರಿತಂತೆ ಚರ್ಚೆ ನಡೆಯುತ್ತಿವೆ. ಆದರೆ, ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಮುಂಬರುವ ದಿನಗಳಲ್ಲಿ ಸಚಿವ ಸಂಪುಟದೊಂದಿಗೆ ಚರ್ಚಿಸಿ ರೈತಪರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.