ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ಸರಿ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೇ ಇತ್ತ ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ.
ಸಿಎಂ ವಿರುದ್ಧ ತೀರ್ಪು ಬರುತ್ತಿದ್ದಂತೇ ಬಿಜೆಪಿ ನಾಯಕರು ಹೇಳಿಕೆ ನೀಡಲಾರಂಭಿಸಿದ್ದು ತಕ್ಷಣವೇ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ವಿಪಕ್ಷ ನಾಯಕ ಆರ್ ಅಶೋಕ್, ಬಿವೈ ವಿಜಯೇಂದ್ರ, ಸಿಟಿ ರವಿ ಮುಂತಾದವರು ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಇದರ ಬೆನ್ನಲ್ಲೇ ಇಂದು ಬೆಂಗಳೂರಿನಲ್ಲಿ ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆಯನ್ನೂ ನಡೆಸಿದೆ. ವಿಧಾನಪರಿಷತ್ ಸದಸ್ಯರಾದ ಸಿಟಿ ರವಿ, ಎನ್ ರವಿಕುಮಾರ್ ನೇತೃತ್ವದಲ್ಲಿ ಬಿಜೆಪಿ ಇಂದು ಮಲ್ಲೇಶ್ವರದ ಬಿಜೆಪಿ ಕಚೇರಿ ಮುಂಭಾಗ ಘೋಷಣೆ ಕೂಗಿ ಪ್ರತಿಭಟನೆ ನಡೆಸಿತು.
ಇನ್ನೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಪತ್ರಿಕಾಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೆಲ್ಲಾ ಬಿಜೆಪಿ ಪಿತೂರಿ ಎಂದಿದ್ದಾರೆ. ಇನ್ನೊಂದೆಡೆ ಇಡೀ ಕಾಂಗ್ರೆಸ್ ಪಕ್ಷವೇ ತಮ್ಮ ಬೆಂಬಲಕ್ಕಿದೆ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.