ಬೆಂಗಳೂರು: ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಅದು ಧಾರ್ಮಿಕ ಭಾವನೆಗೆ ಧಕ್ಕೆ ತಂದಂತೆ ಅಲ್ಲ ಎಂದು ಹೈಕೋರ್ಟ್ ಪ್ರಕರಣವೊಂದರ ವಿಚಾರಣೆ ನಡೆಸಿ ಮಹತ್ವದ ತೀರ್ಪು ನೀಡಿದೆ.
ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಆರೋಪದಲ್ಲಿ ದಕ್ಷಿಣ ಕನ್ನಡದ ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಈ ಮೇಲಿನಂತೆ ಆದೇಶ ನೀಡಿ ಪ್ರಕರಣವನ್ನೇ ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕ ಸದಸ್ಯ ಪೀಠ ಈ ತೀರ್ಪು ನೀಡಿದೆ. ಜೈ ಶ್ರೀರಾಮ್ ಎನ್ನುವುದು ಧಾರ್ಮಿಕ ಭಾವನೆಯನ್ನು ಕೆರಳಿಸಿದಂತೆ ಅಥವಾ ದಕ್ಕೆ ಮಾಡಲು ಹೇಗೆ ಸಾಧ್ಯ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದ್ದಾರೆ. ಇದರೊಂದಿಗೆ ಪ್ರಕರಣವನ್ನು ರದ್ದುಗೊಳಿಸಿದ್ದಾರೆ.
ಮಸೀದಿ ಆವರಣದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದ್ದಲ್ಲದೆ, ಬ್ಯಾರಿ ಸಮುದಾಯದವರನ್ನು ಬದುಕಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾಗಿ ದಕ್ಷಿಣ ಕನ್ನಡದ ಕಡಬ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ತಮ್ಮ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಿರುವುದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಮಸೀದಿ ಆವರಣ ಸಾರ್ವಜನಿಕ ಪ್ರದೇಶವಾಗಿತ್ತು. ಅದು ಅತಿಕ್ರಮಣವಾಗುವುದಿಲ್ಲ. ಅಲ್ಲದೆ ತಮ್ಮ ವಿರುದ್ಧದ ಆರೋಪಗಳಿಗೆ ಯಾವುದೇ ಪುರಾವೆ ಇಲ್ಲ ಎಂದು ಅವರು ಪ್ರತಿಪಾದಿಸಿದ್ದರು.