ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಮುಂದಿನ ನಾಲ್ಕು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ಇಂದೂ ಕೂಡಾ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕಳೆದ ಎರಡು ವಾರಗಳಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಎರಡೂ ಜಿಲ್ಲೆಗಳಲ್ಲಿ ಇಂದೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸೂಚನೆಯಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ನಿನ್ನೆಯಿಡೀ ಮಳೆಯ ಸಿಂಚನವಾಗಿತ್ತು. ಇಂದೂ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಜುಲೈ 19 ರವರೆಗೆ ಭಾರೀ ಮಳೆಯಾಗುವ ಸಂಭವವಿದೆ.
ಕೇವಲ ಕರ್ನಾಟಕ ಮಾತ್ರವಲ್ಲದೆ, ಕೇರಳ, ಗೋವಾ, ಮಹಾರಾಷ್ಟ್ರ ರಾಜ್ಯಗಳಲ್ಲೂ ಭಾರೀ ಮಳೆಯಾಗುತ್ತಿದೆ. ಈ ರಾಜ್ಯಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದೆಹಲಿಯಲ್ಲಿ ತಕ್ಕಮಟ್ಟಿಗೆ ಮಳೆಯಾಗುವ ಸೂಚನೆಯಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ನಿಧಾನವಾಗಿ ಮಳೆ ಒಂದೊಂದೇ ರಾಜ್ಯಕ್ಕೆ ವ್ಯಾಪಿಸುತ್ತಿದೆ.