Publish Date: Thu, 18 Sep 2025 (08:52 IST)
Updated Date: Thu, 18 Sep 2025 (08:54 IST)
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮತ್ತೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಶುರುವಾಗಲಿದೆ. ಇಂದು ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಕಳೆದ ವಾರ ಮತ್ತು ಈ ವಾರದ ಆರಂಭದ ಎರಡು ದಿನ ಕೆಲವು ಕಡೆ ಮಾತ್ರ ಸಾಧಾರಣ ಮಳೆಯಾಗಿದೆ. ಆದರೆ ನಿನ್ನೆಯಿಂದ ಮತ್ತೆ ಹಲವು ಜಿಲ್ಲೆಗಳಲ್ಲಿ ಮಳೆ ಶುರುವಾಗಿದೆ. ವಿಶೇಷವೆಂದರೆ ಈ ವಾರ ಹಲವು ಜಿಲ್ಲೆಗಳಿಗೆ ಗುಡುಗು ಸಹಿತ ಗಾಳಿ ಮಳೆಯ ಮುನ್ಸೂಚನೆಯಿದೆ.
ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ನಾಳೆಯವರೆಗೆ ಭಾರೀ ಮಳೆ ನಿರೀಕ್ಷಿಸಲಾಗಿದೆ. ಬೆಂಗಳೂರು, ತುಮಕೂರು, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬೀದರ್, ಬೆಳಗಾವಿ, ಗದಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉಳಿದಂತೆ ಮೈಸೂರು, ಮಂಡ್ಯ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಚಾಮರಾಜನಗರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆ ಮೋಡ ಕವಿದ ವಾತಾವರಣ ಮತ್ತು ಗುಡುಗು ಮಾತ್ರ ಕಂಡುಬರಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.