ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಹಿರಿಯ ನಾಯಕರನ್ನು ಕಡೆಗಣಿಸುತ್ತಿರುವುದು ನಿಜ. ರಾಜ್ಯದಲ್ಲಿರುವುದು ಕುರುಬರ ಸರಕಾರ. ಸಿಎಂ ತಮ್ಮ ಸುತ್ತಮುತ್ತ ಅವರ ಸಮುದಾಯದವರನ್ನೇ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿರು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಇಬ್ಬರೇ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಎಂದುಕೊಂಡಿದ್ದಾರೆ. ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಆಯ್ತು, ಈಗ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪಕ್ಷ ತೊರೆದಿದ್ದಾರೆ. ಸಿಎಂ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದು ಸಲಹೆ ನೀಡಿದರು.
ಒಂದು ರಾಜ್ಯದ ಮುಖ್ಯಮಂತ್ರಿಯಾದವರು ಎಲ್ಲ ಸಮುದಾಯದ ನಾಯಕರನ್ನು ಕರೆದುಕೊಂಡು ಅಭಿವೃದ್ಧಿಯತ್ತ ಸಾಗಬೇಕು. ಆದರೆ, ಸಿಎಂ ಸಿದ್ದರಾಮಯ್ಯ ತಮ್ಮ ಸಮುದಾಯದ ನಾಯಕರಿಗೆ ಮಾತ್ರ ಪ್ರಾತಿನಿಧ್ಯ ಕೊಡುತ್ತಿದ್ದಾರೆ. ಅನ್ನಭಾಗ್ಯ ಹಾಗೂ ಕ್ಷೀರಭಾಗ್ಯ ಜಾರಿ ಮಾಡುವ ಮೂಲಕ ರಾಜ್ಯದ ಜನತೆಗೆ ಭಿಕ್ಷೆ ಹಾಕುತ್ತಿದ್ದಾರೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಲು ಈಗ ಸಮಯ ಮುಗದಿದೆ. ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ. ನಾಯಕತ್ವ ಬದಲಾವಣೆಯ ಬದಲು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಮುನ್ನಡೆಯಬೇಕು ಎನ್ನುವುದನ್ನು ಚಿಂತನೆ ನಡೆಸಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ