ಹೈದರಾಬಾದ್: ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರು ಹೈದರಾಬಾದ್‍ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ.
ಹೆಚ್1ಎನ್1 ಸೋಂಕು ತಗುಲಿ, ಶ್ವಾಸಕೋಶ ಹಾಗೂ ಜೀರ್ಣಾಂಗ ಸಮಸ್ಯೆಯಿಂದ ಜೀವನ್ಮರಣ ಹೋರಾಟ ನಡೆಸಿದ್ದ ಮಧುಕರ್ ಶೆಟ್ಟಿ ಅವರು ಹೈದರಾಬಾದ್‍ನ ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹೆಚ್1ಎನ್1 ನಿಂದ ಬಳಲುತ್ತಿದ್ದ ಮಧುಕರ ಶೆಟ್ಟಿ ಅವರು ಕಳೆದ ಒಂದು ವಾರದಿಂದ ಹೈದರಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೂರು ದಿನಗಳಿಂದ ಅವರು ಪ್ರಜ್ಞೆಯನ್ನು ಕಳೆದುಕೊಂಡಿದ್ದರು. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಉಡುಪಿ ಮೂಲದ ಮಧುಕರ್ ಶೆಟ್ಟಿ ಅವರು, ಖ್ಯಾತ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿಯವರ ಪುತ್ರ. 1999ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ ಮಧುಕರ್ ಶೆಟ್ಟಿ, ಚಿಕ್ಕಮಗಳೂರಿನ ಎಸ್‍ಪಿಯಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಡಕ್ ಅಧಿಕಾರಿ ಎನಿಸಿಕೊಂಡಿದ್ದ ಅವರು ಭ್ರಷ್ಟಾಚಾರವನ್ನು ಹಾಗೂ ಭ್ರಷ್ಟರನ್ನು ಬೇಟೆಯಾಡಿದ್ದರು. ಬಳಿಕ ಹೈದರಾಬಾದ್ ನಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ನ್ಯಾಷನಲ್ ಪೊಲೀಸ್ ಅಕಾಡೆಮಿ ಉಪನಿರ್ದೇಶಕರಾಗಿದ್ದರು.