ಮಹದಾಯಿ ನ್ಯಾಯಾಧಿಕರಣ ತೀರ್ಪು ವಿರೋಧಿಸಿ ರೈತಪರ ಸಂಘಟನೆಗಳು ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಧರಣಿ ವೇಳೆ ಕಾನೂನು ಹಾಗೂ ಸುವ್ಯವಸ್ಥೆಗೆ ಧಕ್ಕೆಯಾದರೇ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ವಿರೋಧಿಸಿ ರೈತಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಶಾಂತಿಯುತವಾಗಿರಬೇಕು. ಯಾವುದೇ ಕಾರಣಕ್ಕೂ ಶಾಂತಿ ಕದಡುವ ಹಾಗೂ ಪ್ರಚೋದನೆಗೆ ಅವಕಾಶ ನೀಡಬಾರದು ಎಂದು ಮನವಿ ಮಾಡಿಕೊಂಡರು.
ಇಂದು ಕರ್ನಾಟಕ ರಾಜ್ಯ ಬಂದ್ ನಿಮಿತ್ತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದು, ರೈತರ ಧರಣಿ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಅಗತ್ಯ ಬಿದ್ದರೆ ಹೆಚ್ಚುವರಿ ಪಡೆಗಳನ್ನು ಬಳಸಿಕೊಳ್ಳುವಂತೆ ತಿಳಿಸಿದ್ದಾರೆ.
ಯಾವುದೇ ಕಾರಣಕ್ಕೂ ಸಾರ್ವಜನಿಕರ ಆಸ್ತಿಪಾಸ್ತಿ ಹಾಗೂ ಸರಕಾರಿ ಕಚೇರಿಗಳಿಗೆ ಹಾನಿ ಮಾಡದಂತೆ ಪ್ರತಿಭಟನಾ ನಿರತರಲ್ಲಿ ಮನವಿ ಮಾಡಿಕೊಂಡಿದ್ದು, ಅಂತಹ ಘಟನೆಗಳು ಕಂಡುಬಂದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ.
ಇದೇ ವೇಳೆ ಧಾರವಾಡ ಪೊಲೀಸರಿಂದ ಮಹದಾಹಿ ಹೋರಾಟಗಾರರ ಮೇಲಿನ ಅಮಾನವೀಯ ಹಲ್ಲೆಗೆ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅವರು ವಿಷಾದ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ