ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಬಂದ್ ಗೆ ಕಲಬುರ್ಗಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೇಂದ್ರ ಸರ್ಕಾರ ಕಾರ್ಮಿಕ ಮತ್ತು ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ಗೆ ಕಲಬುರಗಿಯಲ್ಲಿ ರೈತ ಸಂಘಟನೆ ಮತ್ತು ಎಡ ಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ. ಬಂದ್ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ಬೆಳಿಗ್ಗೆಯಿಂದಲೇ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.
ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಪೆಟ್ರೋಲ್ ಬಂಕ್ ಗಳು ಮುಚ್ಚಲ್ಪಟ್ಟಿದ್ದವು. ಬಹುತೇಕ ಕಡೆ ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟಿದ್ದವು. ಉಳಿದಂತೆ ಆಟೋ ಸಂಚಾರ, ಇತರೆ ವಾಹನ ಸಂಚಾರ ಎಂದಿನಂತಿತ್ತು. ಬಂದ್ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಛೇರಿ ಎದುರು ಜಾಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹಿಂದುಳಿದ ಹೈ.ಕ. ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಹೆಚ್ಚುವರಿ ಅನುದಾನ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇಂದು ಜಿಲ್ಲಾಧಿಕಾರಿ ಕಛೇರಿ ಎದುರೇ ವಾಸ್ತವ್ಯ ಹೂಡಿ, ನಾಳೆ ಹೋರಾಟ ಮುಂದುವರೆಸಲಾಗುವುದು. ನಾಳೆ ಬೆಳಿಗ್ಗೆ ರೈಲು ರೋಖೋ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸುವುದಾಗಿ ಮುಖಂಡರು ತಿಳಿಸಿದರು.