Publish Date: Thu, 27 Apr 2023 (18:50 IST)
Updated Date: Thu, 27 Apr 2023 (19:17 IST)
ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡ್ತಿದ್ದು, ಅಬ್ಬರದ ಪ್ರಚಾರಕ್ಕೆ ತಯಾರಿ ನಡೆಸಿದ್ದಾರೆ. ಈ ಬಾರಿ ಶತಾಯಗತಾಯ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಮೋದಿ ರಣತಂತ್ರ ರೂಪಿಸಿದ್ದಾರೆ. ಮೋದಿ ಕಾರ್ಯಕ್ರಮ ಹಿನ್ನೆಲೆ ಕೋಲಾರ ತಾಲ್ಲೂಕಿನ ಕೆಂದಟ್ಟಿ ಗ್ರಾಮದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಇತ್ತೀಚೆಗೆ ಕೋಲಾರದಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಪ್ರಧಾನಿ ಮೋದಿಯವರನ್ನು ಕರೆಸಿ ಭರ್ಜರಿ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಪ್ರಧಾನಿ ಮೋದಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದು, ಕೋಲಾರದಲ್ಲೂ ಮತಬೇಟೆ ನಡೆಸಲಿದ್ದಾರೆ. ಇಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಜಿಲ್ಲೆಯಲ್ಲಿ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿ ಮುಂದಾಗಿದೆ. ಕೆಂದಟ್ಟಿ ಗ್ರಾಮದಲ್ಲಿರುವ ಖಾಸಗಿ ಜಮೀನಿನಲ್ಲಿ ಮೋದಿ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. 100 ಎಕರೆ ವಿಸ್ತಾರವಾದ ಪ್ರದೇಶದಲ್ಲಿ ನಡೆಯುವ ಸಮಾವೇಶಕ್ಕೆ ಲಕ್ಷಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆ ಇದ್ದು, ಬೃಹತ್ ವೇದಿಕೆ ಮತ್ತು ಜರ್ಮನ್ ಮಾದರಿ ಪೆಂಡಾಲ್ ನಿರ್ಮಾಣ ಮಾಡಲಾಗುತ್ತಿದೆ.