Webdunia - Bharat's app for daily news and videos

Install App

ಹೊಸ ಸೋಂಕಿನ ಪರೀಕ್ಷೆಗೆ ಕಡಿಮೆ ದರ ನಿಗದಿ ಮಾಡಲು ಕ್ರಮ

Webdunia
ಸೋಮವಾರ, 6 ಮಾರ್ಚ್ 2023 (21:19 IST)
H3N2 ವೈರಸ್‌ ಸೋಂಕುಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಎಲ್ಲಾ ಆಸ್ಪತ್ರೆಗಳ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕೆಂದು ಸೂಚನೆ ನೀಡಿ ಆದೇಶ ಹೊರಡಿಸಲಾಗುವುದು. ಹಾಗೆಯೇ ಜನರು ಮುನ್ನೆಚ್ಚರಿಕೆ ವಹಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.ಎಚ್‌3ಎನ್‌2 ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ, ತಾಂತ್ರಿಕ ಸಮಿತಿ ಹಾಗೂ ಹಿರಿಯ ಅಧಿಕಾರಿಗೊಳೊಂದಿಗೆ ಸಚಿವರು ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
 
ಇನ್‌ಫ್ಲುಯೆಂಜಗೆ ಪ್ರತಿ ವರ್ಷ ಲಸಿಕೆ ನೀಡುತ್ತಿದ್ದು, ಇದನ್ನು ಎಲ್ಲಾ ಆರೋಗ್ಯ ಸಿಬ್ಬಂದಿ ಪಡೆಯಲು ಲಿಖಿತ ಸೂಚನೆ ನೀಡಲಾಗುವುದು. ಐಸಿಯುನಲ್ಲಿ ಕೆಲಸ ಮಾಡುವವರು ಸೇರಿದಂತೆ ಕೆಲ ನಿರ್ದಿಷ್ಟ ವೈದ್ಯರು, ಸಿಬ್ಬಂದಿಗೆ ಸರ್ಕಾರದಿಂದಲೇ ಲಸಿಕೆ ನೀಡಲಾಗುವುದು. 2019 ರವರೆಗೆ ಈ ಲಸಿಕೆ ನೀಡಲಾಗುತ್ತಿತ್ತು. ಕೋವಿಡ್‌ ಬಂದ ಬಳಿಕ ನೀಡಿಲ್ಲ. ಈಗ ಮತ್ತೆ ಅದನ್ನು 31 ಜಿಲ್ಲೆಗಳಲ್ಲಿ ನೀಡಲಾಗುವುದು ಎಂದು ತಿಳಿಸಿದರು.
 
ಪ್ರತಿ ವಾರ 25 ಪರೀಕ್ಷೆ ಮಾಡಬೇಕೆಂದು ಕೇಂದ್ರ ಸರ್ಕಾರ ಗುರಿ ನೀಡಿದೆ. ಬೆಂಗಳೂರಿನ ವಿಕ್ಟೋರಿಯಾ ಹಾಗೂ ವಾಣಿ ವಿಲಾಸ ಆಸ್ಪತ್ರೆಗಳಲ್ಲಿ ಸಾರಿ ಹಾಗೂ ಐಎಲ್‌ಐ ಪ್ರಕರಣಗಳ ಪೈಕಿ 25 ಮಂದಿಗೆ ಈ ಪರೀಕ್ಷೆ ಮಾಡಿ ಯಾವ ಪ್ರಭೇದದ ವೈರಾಣು ಎಂದು ಪತ್ತೆ ಮಾಡಲಾಗುವುದು ಎಂದರು.
 
15 ವರ್ಷಕ್ಕಿಂತ ಕಡಿಮೆ ವಯೋಮಾನದ ಮಕ್ಕಳಲ್ಲಿ, 65 ವರ್ಷ ಮೇಲ್ಪಟ್ಟ ವೃದ್ಧರಿಗೆ ಈ ಸೋಂಕು ಕಂಡುಬರಬಹುದು. ಗರ್ಭಿಣಿಯರಿಗೂ ಸೋಂಕು ಬರುವ ಸಾಧ್ಯತೆ ಹೆಚ್ಚಿದೆ. ಶುಚಿತ್ವ, ಗುಂಪುಗೂಡುವುದನ್ನು ತಡೆಯುವುದು, ಕೈಗಳ ಸ್ವಚ್ಛತೆ ಮೊದಲಾದ ಕ್ರಮಗಳ ಮೂಲಕ ಸೋಂಕು ಹರಡುವುದನ್ನು ತಡೆಯಬಹುದು ಎಂದರು.
 
ಅನಗತ್ಯವಾಗಿ ಆಂಟಿ ಬಯಾಟಿಕ್‌ ಬೇಡ
 
ಜನವರಿಯಿಂದ ಮಾರ್ಚ್‌ವರೆಗೆ ಎಚ್‌1ಎನ್‌1 ನ 20 ಪ್ರಕರಣಗಳು ಪತ್ತೆಯಾಗಿವೆ. ಎಚ್‌3ಎನ್‌2 ನ 26 ಪ್ರಕರಣ ಪತ್ತೆಯಾಗಿದೆ. ಇನ್‌ಫ್ಲುಯೆಂಜ ಬಿ 10, ಅಡಿನೋ 69 ಪ್ರಕರಣ ಕಂಡುಬಂದಿದೆ. ಅನೇಕರು ಆಂಟಿ ಬಯಾಟಿಕ್‌ ಮಾತ್ರೆಗಳನ್ನು ಸೇವಿಸುತ್ತಿದ್ದಾರೆ. ವೈದ್ಯರ ಸಲಹೆ ಇಲ್ಲದೆ ಔಷಧಿ ಸೇವಿಸುವುದು, ಅನಗತ್ಯವಾಗಿ ಆಂಟಿ ಬಯಾಟಿಕ್‌ ಸೇವಿಸುವುದು ಸರಿಯಲ್ಲ ಎಂದು ತಜ್ಞರು ಹೇಳಿದ್ದಾರೆ. ಇದಕ್ಕೆ ಸಿಂಪ್ಟಮೆಟಿಕ್‌ ಚಿಕಿತ್ಸೆ ನೀಡಲಾಗುತ್ತದೆ. ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಲಾಗಿದೆ. ಔಷಧಿಯ ಕೊರತೆ ಇಲ್ಲ ಎಂದು ತಿಳಿಸಿದರು.
 
ಬೇಸಿಗೆಯ ಆರಂಭಕ್ಕೆ ಮುನ್ನವೇ ಫೆಬ್ರವರಿಯಲ್ಲೇ ತಾಪಮಾನ ಹೆಚ್ಚಾಗಿದೆ. ಇದರಿಂದ ಸಮಸ್ಯೆ ಹೆಚ್ಚುತ್ತಿದೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ಬಿಸಿಲಲ್ಲಿ ಓಡಾಡುವುದು ತಪ್ಪಿಸಬೇಕು. ಕನಿಷ್ಠ 2-3 ಲೀಟರ್‌ ನೀರು, ಮಜ್ಜಿಗೆ, ಎಳನೀರು, ಶರಬತ್‌ ಕುಡಿಯುವುದೊಳಿತು. ದೇಹದಲ್ಲಿ ನೀರು ಕಡಿಮೆ ಆಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.ಈ ಸೋಂಕು ಬಂದರೆ 2-5 ದಿನದೊಳಗೆ ನಿವಾರಣೆಯಾಗುತ್ತದೆ. ಕೋವಿಡ್‌ಗೊಳಗಾದವರಿಗೆ ಸೋಂಕು ಬಂದರೆ ಹೆಚ್ಚು ಕೆಮ್ಮು ಇರುತ್ತದೆ. ಬೆಂಗಳೂರಿನಲ್ಲಿ ಈ ಸೋಂಕಿನ ಎರಡು ಪ್ರಕರಣಗಳು ಕಂಡುಬಂದಿವೆ ಎಂದರು.
 
ದರ ನಿಯಂತ್ರಣಕ್ಕೆ ಸಮಿತಿ ಹೊಸ ಸೋಂಕು ಪರೀಕ್ಷೆಯ ದರ ನಿಯಂತ್ರಣಕ್ಕೆ ಕಡಿವಾಣ ಹಾಕಲು ಸಮಿತಿ ರಚಿಸಲು ಸೂಚಿಸಲಾಗಿದೆ. ಕಡಿಮೆ ದರದಲ್ಲಿ ಪರೀಕ್ಷೆ ಮಾಡುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ. ವರದಿ ಬಂದ ಬಳಿಕ ಪರೀಕ್ಷೆಗೆ ದರ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments