ಬೆಂಗಳೂರು: ಹಿರಿಯ ಬಿಜೆಪಿ ನಾಯಕ, ಚಾಮರಾಜನಗರ ಮೀಸಲು ಕ್ಷೇತ್ರದ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.
ಅವರಿಗೆ 76 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಕೆಲವು ದಿನಗಳಿಂದ ಅವರು ಅನಾರೋಗ್ಯಪೀಡಿರಾಗಿದ್ದರು. ಇದೀಗ ಹೃದಯಾಘಾತಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ ಬಿಜೆಪಿ ಜೊತೆ ಮುನಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿ ಪಡೆದಿದ್ದರು.
ಬೆಂಗಳೂರು ಓಲ್ಡ್ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಬಹುಅಂಗಾಂಗ ವೈಫಲ್ಯ ಮತ್ತು ಹೃದಯಾಘಾತದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಅವರ ಪುತ್ರಿ ಪೂರ್ಣಿಮಾ ಮಾಹಿತಿ ನೀಡಿದ್ದಾರೆ. ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ.
ಈ ಬಾರಿಯೂ ಅವರು ಚಾಮರಾಜನಗರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಹೀಗಾಗಿ ಅವರು ಮುನಿಸಿಕೊಂಡಿದ್ದರು. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು ಸುದ್ದಿಯಾಗಿತ್ತು. ರಾಜ್ಯ ಬಿಜೆಪಿ ಘಟಕ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದೆ. ಶ್ರೀನಿವಾಸ್ ಪ್ರಸಾದ್ ಪ್ರಭಾವೀ ದಲಿತ ನಾಯಕರಾಗಿದ್ದರು. ಅವರ ನಿಧನದಿಂದ ದಲಿತ ಸೂರ್ಯ ಮುಳುಗಿದಂತಾಗಿದೆ ಎಂದು ಬಿಜೆಪಿ ಬಣ್ಣಿಸಿದೆ.